ADVERTISEMENT

ಲೈಂಗಿಕ ಕಿರುಕುಳ ಪ್ರಕರಣ: ಸಿಜೆಐಗೆ ಕ್ಲೀನ್‌ಚಿಟ್ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಮೇ 2019, 11:11 IST
Last Updated 7 ಮೇ 2019, 11:11 IST
   

ನವದೆಹಲಿ: ಲೈಂಗಿಕ ಕಿರುಕುಳ ಆರೋಪದಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಅವರಿಗೆ ಕ್ಲೀನ್‌ಚಿಟ್ ನೀಡಿರುವುದನ್ನು ವಿರೋಧಿಸಿ ನ್ಯಾಯವಾದಿಗಳು ಮತ್ತು ಹೋರಾಟಗಾರ್ತಿಯರು ಸುಪ್ರೀಂಕೋರ್ಟ್ ಹೊರಗೆ ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನಾಕಾರರನ್ನು ಬಂಧಿಸಿ ಮಂಡಿ ಮಾರ್ಗ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಹೋರಾಟಗಾರ್ತಿಯರು ಟ್ವೀಟಿಸಿದ್ದಾರೆ.

ಸುಪ್ರೀಂಕೋರ್ಟ್ ಹೊರಗೆ ಪ್ರತಿಭಟನೆ ನಡೆಸಿದ್ದಕ್ಕಾಗಿ ದೆಹಲಿ ಪೊಲೀಸ್ ಕಾಯ್ದೆ ಸೆಕ್ಷನ್ 65 ಅಡಿಯಲ್ಲಿ ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಪಿಆರ್‌ಒ ಮಧುರ್ ವರ್ಮಾ ಹೇಳಿದ್ದಾರೆ. ಸುಪ್ರೀಂಕೋರ್ಟ್ ಹೊರಗಡೆ ಸಿಆರ್‌ಪಿಸಿ ಸೆಕ್ಷನ್ 144 ವಿಧಿಸಲಾಗಿದೆ.

ADVERTISEMENT

ಪ್ರತಿಭಟನೆ ನಡೆಸಿದ್ದ ಮೂವರು ಪುರುಷರು ಮತ್ತು 52 ಮಹಿಳೆಯರನ್ನು ಬೆಳಗ್ಗೆ 10.45ಕ್ಕೆ ಬಂಧಿಸಲಾಗಿದೆ ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನ ಆಂತರಿಕ ತನಿಖಾ ಸಮಿತಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ವಿರುದ್ಧದ ಲೈಂಗಿಕ ಕಿರುಕುಳ ಆರೋಪದಲ್ಲಿ ಹುರುಳಿಲ್ಲ ಎಂದು ಹೇಳಿ ಕ್ಲೀನ್‌ಚಿಟ್ ನೀಡಿದ್ದನ್ನು ವಿರೋಧಿಸಿ ಪ್ರತಿಭಟನಾಕಾರರು ಪ್ಲೆಕಾರ್ಡ್ ಹಿಡಿದು ಸುಪ್ರೀಂಕೋರ್ಟ್ ಹೊರಗಡೆ ಶಾಂತಿಯುತ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದರು.ಅವರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಪ್ರತಿಭಟಿಸಲಿರುವ ಸಾಂವಿಧಾನಿಕ ಹಕ್ಕು ಸುಪ್ರೀಂಕೋರ್ಟ್‌ಗೆ ಅನ್ವಯಿಸುವುದಿಲ್ಲವೇ? ಎಂದು ಪ್ರಶಾಂತ್ ಭೂಷಣ್ ಟ್ವೀಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.