ADVERTISEMENT

‌‌ಜಾಗತಿಕ ಹವಾಮಾನ ಬದಲಾವಣೆ ಬಗ್ಗೆ ಕಳವಳ; ಕಠಿಣ ಕ್ರಮಕ್ಕೆ ಆಗ್ರಹಿಸಿದ ಜೈರಾಮ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಜೂನ್ 2025, 10:26 IST
Last Updated 22 ಜೂನ್ 2025, 10:26 IST
ಜೈರಾಮ್ ರಮೇಶ್
ಜೈರಾಮ್ ರಮೇಶ್   

ನವದೆಹಲಿ: ಜಾಗತಿಕ ಹವಾಮಾನ ಬದಲಾವಣೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, ಇದೀಗ ಜಗತ್ತಿಗೆ ಬೇಕಾಗಿರುವುದು ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ಕಠಿಣ ಕ್ರಮಗಳೇ ಹೊರತು 2050ರ ನಂತರದ ಘೋಷಣೆಗಳಲ್ಲ ಎಂದು ಕಿಡಿಕಾರಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಭಾರತದ ಇಬ್ಬರು ವಿಜ್ಞಾನಿಗಳು ಸೇರಿದಂತೆ ವಿಶ್ವದಾದ್ಯಂತದ ಪ್ರತಿಷ್ಠಿತ ಸಂಸ್ಥೆಗಳ 60 ವಿಜ್ಞಾನಿಗಳು ಜಾಗತಿಕ ಹವಾಮಾನ ಬದಲಾವಣೆಯ ಸೂಚಕಗಳನ್ನು ಪ್ರಕಟಿಸಿದ್ದಾರೆ ಎಂದು ತಿಳಿಸಿದ್ದಾರೆ.

ಕಳೆದ ದಶಕದಲ್ಲಿ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯ ಹೆಚ್ಚಳದ ದರವು ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗಿರುವುದು ಕಂಡು ಬಂದಿದೆ. ಆದರೆ ಜಾಗತಿಕ ಸರಾಸರಿ ಸಮುದ್ರ ಮಟ್ಟದ ಏರಿಕೆಯಾಗುತ್ತಲೇ ಇದೆ ಎಂದು ಜೈರಾಮ್ ಆತಂಕ ವ್ಯಕ್ತಪಡಿಸಿದ್ದಾರೆ.

ADVERTISEMENT

ಎಲ್ಲಾ ಹಸಿರುಮನೆ ಅನಿಲಗಳ ಹೊರಸೂಸುವಿಕೆ ನಿರಂತರವಾಗಿ ಮುಂದುವರಿದರೆ, ಮಾನವನ ಚಟುವಟಿಕೆಗಳಿಂದ ಉಂಟಾಗುವ ಪರಿಣಾಮಗಳಿಂದ ಜಾಗತಿಕ ತಾಪಮಾನವು ಸುಮಾರು 5 ವರ್ಷಗಳಲ್ಲಿ ನಿರ್ಣಾಯಕ 1.5 ಡಿಗ್ರಿ ಸೆಲ್ಸಿಯಸ್ ತಲುಪುತ್ತದೆ ಎಂದು ಜೈರಾಮ್‌ ಹೇಳಿದ್ದಾರೆ.

ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಮೇಶ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.