ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾಡ ಜಿಲ್ಲೆಯಲ್ಲಿ ಮೇಘಸ್ಫೋಟ
(ಪಿಟಿಐ ಚಿತ್ರ)
ಕಿಶ್ತ್‌ವಾಡ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾಡ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ಉಂಟಾದ ಹಠಾತ್ ಪ್ರವಾಹದಲ್ಲಿ ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ವ್ಯಾಪಕ ಹಾನಿ ಉಂಟಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಆತಂಕ ಎದುರಾಗಿದೆ. ಈವರೆಗೆ 65 ಮಂದಿಯನ್ನು ರಕ್ಷಿಸಲಾಗಿದೆ.
ಮಧ್ಯಾಹ್ನ 12ರಿಂದ 1 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಚಸೋಟಿಯಲ್ಲಿ ಮಚೈಲ್ ಮಾತಾ ದೇಗುಲಕ್ಕೆ ಪಾದಯಾತ್ರೆ ಹೋಗಲು ಭಕ್ತರು ಸೇರಿದ್ದರು. 8.5 ಕಿ.ಮೀ. ದೂರದ ಪಾದಯಾತ್ರೆ ಇಲ್ಲಿಂದಲೇ ಪ್ರಾರಂಭವಾಗುತ್ತದೆ.
ಕಿಶ್ತ್‌ವಾಡದಿಂದ ಸುಮಾರು 90 ಕಿ.ಮೀ. ದೂರದಲ್ಲಿರುವ ಚಸೋಟಿ ಪ್ರದೇಶವು 9,500 ಅಡಿ ಎತ್ತರಲ್ಲಿದೆ. ದುರಂತದ ಹಿನ್ನೆಲೆಯಲ್ಲಿ ವಾರ್ಷಿಕ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಉಧಂಪುರದಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಎರಡು ಪಡೆಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಕಿಶ್ತ್‌ವಾಡ ಜಿಲ್ಲಾಧಿಕಾರಿ ಪಂಕಜ್ ಕುಮಾರ್ ಶರ್ಮಾ ತಿಳಿಸಿದ್ದಾರೆ.
ದುರಂತಕ್ಕೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸಂತಾಪ ಸೂಚಿಸಿದ್ದಾರೆ. ಇನ್ನೊಂದೆಡೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.