ಮೇಘಸ್ಫೋಟ
ಜಮ್ಮು: ಜಮ್ಮು–ಕಾಶ್ಮೀರದ ಕಥುವಾ ಜಿಲ್ಲೆಯ ಅತೀ ದೂರದ ಗ್ರಾಮವೊಂದರಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಏಳು ಜನರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಶನಿವಾರ ರಾತ್ರಿ ರಾಜ್ ಬಾಗ್ ಪ್ರದೇಶದ ಘಾಟಿ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದ್ದು ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳಕ್ಕೆ ಧಾವಿಸಿದ್ದು ರಕ್ಷಣೆ ಕಾರ್ಯಾ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದುವರೆಗೆ 7 ಮೃತ ದೇಹಗಳನ್ನು ಪತ್ತೆಹಚ್ಚಲಾಗಿದ್ದು, ಆರು ಮಂದಿಯನ್ನು ಗಾಯಗೊಂಡ ಸ್ಥಿತಿಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಥುವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಾಗರ್ಡ್, ಚಾಂಗ್ಡಾ ಗ್ರಾಮಗಳು ಹಾಗೂ ಲಖನ್‌ಪುರ ಠಾಣಾ ವ್ಯಾಪ್ತಿಯ ದಿಲ್ವಾನ್–ಹುಟ್ಲಿ ಪ್ರದೇಶದಲ್ಲೂ ಭೂಕುಸಿತ ಸಂಭವಿಸಿದ್ದು ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ತೀವ್ರ ಮಳೆ ಪರಿಣಾಮ ಕೆರೆಗಳು, ಹಳ್ಳ ಕೊಳ್ಳಗಳಲ್ಲಿ ನೀರಿನ ಮಟ್ಟ ತೀವ್ರ ಏರಿಕೆಯಾಗಿದೆ. ಉಜ್ ನದಿ ಅಪಾಯದ ಮಟ್ಟದ ಮೀರಿ ಹರಿಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪರಿಸ್ಥಿತಿ ನಿಯಂತ್ರಣಕ್ಕಾಗಿ ಜಿಲ್ಲಾ ಆಡಳಿತ ನಿಗಾ ಇಟ್ಟಿದ್ದು, ಜನರು ಮುಳುಗಡೆ ಪ್ರದೇಶಗಳಿಂದ ದೂರವಿರಲು ಮನವಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇಘಸ್ಫೋಟ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.