ಮೇಘಸ್ಫೋಟದಿಂದಾಗಿ ಕಥುವಾದ ರಸ್ತೆಗಳ ದುಸ್ಥಿತಿ
ಪಿಟಿಐ ಚಿತ್ರ
ಶ್ರೀನಗರ: ಜಮ್ಮು–ಕಾಶ್ಮೀರದ ಕಥುವಾ ಜಿಲ್ಲೆಯ ಗ್ರಾಮವೊಂದರಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹ ಪೀಡಿತ ಪ್ರದೇಶದಲ್ಲಿ ಹೆಲಿಕಾಪ್ಟರ್ ಬಳಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಈ ಅವಘಡದಲ್ಲಿ ಏಳು ಮಂದಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ರಾತ್ರಿ ರಾಜ್ ಬಾಗ್ ಪ್ರದೇಶದ ಘಾಟಿ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ಸೇನಾ ತುಕಡಿ, ಎಸ್‌ಡಿಆರ್‌ಎಫ್, ಸೇರಿದಂತೆ ಪೊಲೀಸರು ಜನರನ್ನು ಹೆಲಿಕಾಪ್ಟರ್ ಮೂಲಕ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುತ್ತಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ಕಥುವಾ ಜಿಲ್ಲಾಧಿಕಾರಿ ರಾಜೇಶ್ ಶರ್ಮಾ ತಿಳಿಸಿದ್ದಾರೆ.
ನಾಪತ್ತೆಯಾದವರ ಪತ್ತೆಗಾಗಿ ಯೋಧ ಕಾರ್ಯ ಮುಂದುವರಿದಿದೆ. ಜನರಿಗೆ ಅಗತ್ಯವಿರುವ ಹಾಲು ಸೇರಿದಂತೆ ಆಹಾರ ಪದಾರ್ಥಗಳನ್ನು ಒದಗಿಸಲಾಗುವುದು ಎಂದು ಶರ್ಮಾ ಹೇಳಿದ್ದಾರೆ.
ಕಥುವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಾಗರ್ಡ್, ಚಾಂಗ್ಡಾ ಗ್ರಾಮಗಳು ಹಾಗೂ ಲಖನ್‌ಪುರ ಠಾಣಾ ವ್ಯಾಪ್ತಿಯ ದಿಲ್ವಾನ್–ಹುಟ್ಲಿ ಪ್ರದೇಶದಲ್ಲೂ ಭೂಕುಸಿತ ಸಂಭವಿಸಿದ್ದು ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.