ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಮತದಾರರ ಪಟ್ಟಿಯಲ್ಲಿ ಅಕ್ರಮವೆಸಗಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಆತಿಶಿ ಸೋಮವಾರ ಆರೋಪಿಸಿದ್ದಾರೆ.
ಇಲ್ಲಿನ ಪ್ರತಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ಮಾಜಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸ್ಪರ್ಧಿಸುತ್ತಿರುವ ನವದೆಹಲಿ ಕ್ಷೇತ್ರದಲ್ಲಿ 'ಮತದಾರರ ಪಟ್ಟಿಯಲ್ಲಿ ಹಗರಣ' ನಡೆಯುತ್ತಿದೆ. ಶೇ 10ರಷ್ಟು ಹೊಸ ಮತದಾರರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ ಹಾಗೂ ಶೇ 5.5ರಷ್ಟು ಮತದಾರರ ಹೆಸರನ್ನು ಅಳಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವಿಷಯದಲ್ಲಿ ಚುನಾವಣಾ ಆಯೋಗದ ನಡೆಯನ್ನು ಪ್ರಶ್ನಿಸಿರುವ ಆತಿಶಿ, ಆಯೋಗದ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಮುಖ್ಯ ಚುನಾವಣಾ ಆಯೋಗಕ್ಕೂ ಪತ್ರ ಬರೆದು ಈ ಸಮಸ್ಯೆಯನ್ನು ಪರಿಹಾರಿಸುವಂತೆ ಮನವಿ ಮಾಡಿದ್ದೇನೆ ಎಂದೂ ಆತಿಶಿ ತಿಳಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ನಿಯೋಗವು 2024ರ ಡಿಸೆಂಬರ್11 ರಂದು ಚುನಾವಣಾ ಆಯೋಗವನ್ನು ಭೇಟಿ ಮಾಡಿ ಸಾಮೂಹಿಕವಾಗಿ ಮತದಾರರನ್ನು ಅಳಿಸಿರುವುದರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಿತ್ತು.
70 ಸದಸ್ಯ ಬಲ ಹೊಂದಿರುವ ದೆಹಲಿ ವಿಧಾನಸಭೆ ಚುನಾವಣೆಯು ಫೆಬ್ರುವರಿಯಲ್ಲಿ ನಡೆಯುವ ನಿರೀಕ್ಷೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.