ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ವಿಧಾನಸಭೆಯಲ್ಲಿ ಶುಕ್ರವಾರ ವಿಶ್ವಾಸ ಮತಯಾಚನೆಯ ನಿರ್ಣಯ ಮಂಡಿಸಿದ್ದು ಶನಿವಾರ ಈ ಬಗ್ಗೆ ಚರ್ಚೆ ನಡೆಯಲಿದೆ.
ನಿರ್ಣಯ ಮಂಡಿಸಿ ಮಾತನಾಡಿದ ಅವರು, ‘ನಮ್ಮ ಪಕ್ಷದ ಇಬ್ಬರು ಶಾಸಕರನ್ನು ಭೇಟಿ ಮಾಡಿರುವ ಬಿಜೆಪಿ ಸದಸ್ಯರು ತಲಾ ₹25 ಕೋಟಿ ನೀಡುವುದಾಗಿ ಹೇಳಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲಾಗುತ್ತದೆ. ಸರ್ಕಾರ ಬೀಳಲಿದೆ ಎಂಬುದಾಗಿ ಹೇಳಿದ್ದರು. ಈ ಕುರಿತು ಆ ಇಬ್ಬರು ಶಾಸಕರೇ ನನ್ನ ಬಳಿ ಹೇಳಿದ್ದಾರೆ’ ಎಂದು ತಿಳಿಸಿದರು.
ದೆಹಲಿ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದು ಸುಳ್ಳು. ಎಎಪಿ ಸರ್ಕಾರವನ್ನು ಕೆಡವಲು ಬಿಜೆಪಿ ಈ ರೀತಿಯ ಸುಳ್ಳುಗಳನ್ನು ಹೇಳುತ್ತಿದೆ ಎಂದು ಅವರು ಆರೋಪಿಸಿದರು.
ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ 6ನೇ ಸಮನ್ ಜಾರಿ ಮಾಡಿರುವ ಬೆನ್ನಲ್ಲೇ, ಅವರು ವಿಶ್ವಾಸ ಮತಯಾಚನೆಯ ಮೊರೆ ಹೋಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.