
ಎಂ.ಕೆ. ಸ್ಟಾಲಿನ್ ಮತ್ತು ನರೇಂದ್ರ ಮೋದಿ
ಧರ್ಮಪುರಿ: ಪ್ರಧಾನಿ ನರೇಂದ್ರ ಮೋದಿ ಅವರು ‘ದ್ವೇಷ ರಾಜಕಾರಣ’ದಲ್ಲಿ ತೊಡಗಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಹಾರದಲ್ಲಿ ದ್ವೇಷ ಭಾಷಣ ಮಾಡಿದಂತೆ ತಮಿಳುನಾಡಿನಲ್ಲಿ ಇದೇ ರೀತಿಯ ಧಾಟಿಯಲ್ಲಿ ಮಾತನಾಡಲು ಮೋದಿ ಅವರಿಗೆ ಧೈರ್ಯ ಇದೆಯೇ’ ಎಂದು ಸ್ಟಾಲಿನ್ ಪ್ರಶ್ನಿಸಿದ್ದಾರೆ.
‘ಯಾರು ಏನೇ ಪಿತೂರಿ ನಡೆಸಿದರೂ, ಎಷ್ಟೇ ಮಾನಹಾನಿಕರ ಹೇಳಿಕೆಗಳನ್ನು ನೀಡಿದರೂ, ಎಷ್ಟೇ ನಕಲಿ ಸುದ್ದಿಗಳನ್ನು ಹರಡಿದರೂ, 2026ರಲ್ಲಿ ನಮ್ಮದೇ ಸರ್ಕಾರ (ಡಿಎಂಕೆ) ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ’ ಎಂದು ಸ್ಟಾಲಿನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಮ್ಮ ಪಕ್ಷವು ಎಐಎಡಿಎಂಕೆ ಹಿಡಿತದಿಂದ ರಾಜ್ಯವನ್ನು ಮುಕ್ತಗೊಳಿಸಲು ದೃಢನಿಶ್ಚಯ ಹೊಂದಿದೆ ಎಂದೂ ಅವರು ಹೇಳಿದ್ದಾರೆ.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ನವೆಂಬರ್ 2ರಂದು ಕರೆದಿದ್ದ ಸರ್ವಪಕ್ಷ ಸಭೆಯನ್ನು ಎಐಎಡಿಎಂಕೆ ಮತ್ತು ಬಿಜೆಪಿ ಬಹಿಷ್ಕರಿಸಿದ್ದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ಎಸ್‌ಐಆರ್ ಬಗ್ಗೆ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.
ತಮಿಳುನಾಡಿನ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಮತ್ತು ಪ್ರಜಾಪ್ರಭುತ್ವವನ್ನು ಸಮಾಧಿ ಮಾಡುವ ಎಸ್‌ಐಆರ್ ಪ್ರಕ್ರಿಯೆಯನ್ನು ವಿರೋಧಿಸುವುದು ಎಲ್ಲಾ ರಾಜಕೀಯ ಪಕ್ಷಗಳ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.