ವಿಜಯ್ ಶಾ ಮತ್ತು ಕರ್ನಲ್ ಸೋಫಿಯಾ ಖುರೇಷಿ
ನವದೆಹಲಿ: ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರ ಬಂಧನಕ್ಕೆ ತಡೆ ನೀಡಿದ್ದ ಮಧ್ಯಂತರ ಆದೇಶವನ್ನು ಸುಪ್ರೀಂ ಕೋರ್ಟ್ ಬುಧವಾರ ವಿಸ್ತರಿಸಿದೆ.
ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿರುವ ಕಾರಣ ಮಧ್ಯಪ್ರದೇಶ ಹೈಕೋರ್ಟ್‌ನಲ್ಲಿ ಬಾಕಿ ಇರುವ ವಿಚಾರಣೆಗಳನ್ನು ಮುಕ್ತಾಯಗೊಳಿಸಲಾಗಿದೆ ಎಂದು ವರದಿಯಾಗಿದೆ.
ಪ್ರಕರಣ ಸಂಬಂಧ ಮಧ್ಯಪ್ರದೇಶ ರಾಜ್ಯ ಪೊಲೀಸ್ ಇಲಾಖೆಯ ವಿಶೇಷ ತನಿಖಾ ತಂಡವು (ಎಸ್‌ಐಟಿ) ಸಲ್ಲಿಸಿರುವ ಪ್ರಥಮ ವಸ್ತುಸ್ಥಿತಿ ವರದಿಯನ್ನು ಪರಿಶೀಲನೆ ನಡೆಸುತ್ತಿರುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.
ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಮೇ 20ರಂದು ಎಸ್‌ಐಟಿ ತಂಡ ರಚಿಸಲಾಗಿತ್ತು. ಐಜಿಪಿ ಪ್ರಮೋದ್ ವರ್ಮಾ, ಡಿಐಜಿ ಕಲ್ಯಾಣ್ ಚಕ್ರವರ್ತಿ ಮತ್ತು ಎಸ್‌ಪಿ ವಾಹಿನಿ ಸಿಂಗ್ ಅವರು ಈ ತಂಡದಲ್ಲಿದ್ದಾರೆ.
ಪಾಕಿಸ್ತಾನ ವಿರುದ್ಧದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಅಧಿಕೃತವಾದ ಮಾಹಿತಿ ಒದಗಿಸುತ್ತಿದ್ದ ತಂಡದ ಭಾಗವಾಗಿದ್ದ ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ವಿಜಯ್ ಶಾ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.
ಏನಿದು ಪ್ರಕರಣ?
‘ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆಸುವ ಮೂಲಕ ಯಾರು ನಮ್ಮ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದರೊ... ಅವರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದೆವು’ ಎಂದು ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ವಿಜಯ್ ಶಾ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನೀಡಿರುವ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಈಚೆಗೆ ಈ ವಿಡಿಯೊವನ್ನು ಭಾರಿ ಸಂಖ್ಯೆಯಲ್ಲಿ ಹಂಚಿಕೊಳ್ಳಲಾಗುತ್ತಿತ್ತು. ವಿಜಯ್ ಅವರ ವಿರುದ್ಧ ಸಾರ್ವಜನಿಕರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಡಿಯೊವನ್ನು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಹಂಚಿಕೊಂಡಿದ್ದು ತೀವ್ರವಾಗಿ ಟೀಕಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.