ಕರ್ನಲ್ ಸೋಫಿಯಾ ಖುರೇಷಿ
–ಪಿಟಿಐ ಚಿತ್ರ
ಭೋಪಾಲ್: ಕರ್ನಲ್ ಸೋಫಿಯಾ ಖುರೇಷಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾದ ಸಚಿವ ಹಾಗೂ ಬಿಜೆಪಿ ಮುಖಂಡ ವಿಜಯ್ ಶಾ ವಿರುದ್ಧ ಇಂದೋರ್‌ನಲ್ಲಿ ಎಫ್‌ಐಆರ್ ದಾಖಲಾಗಿದೆ.
ಬುಧವಾರ ಎಫ್‌ಐಆರ್ ದಾಖಲಿಸುವಂತೆ ರಾಜ್ಯ ಪೊಲೀಸರಿಗೆ ಮಧ್ಯಪ್ರದೇಶ ಹೈಕೋರ್ಟ್ ಆದೇಶಿಸತ್ತು. ಈ ಹಿನ್ನೆಲೆಯಲ್ಲಿ ಇಂದೋರ್‌ನ ಮನ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಹಿತಿಕಾ ತಿಳಿಸಿದ್ದಾರೆ.
ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಕಾಯ್ದೆ (152), ಸಮುದಾಯಗಳ ನಡುವೆ ಕೋಮು ಭಾವನೆ ಕೆರಳಿಸುವುದು (197 (1) (ಸಿ) ಮತ್ತು ಸಾರ್ವಜನಿಕರಲ್ಲಿ ಶಾಂತಿಗೆ ಭಂಗ (196 (1) (ಬಿ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಚಿವ ಶಾ ನೀಡಿದ್ದಾರೆ ಎನ್ನಲಾದ ವಿವಾದಾತ್ಮಕ ಹೇಳಿಕೆ ಕುರಿತು ಹೈಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಸಚಿವ ಶಾ ಹೇಳಿದ್ದೇನು: ಕಾರ್ಯಕ್ರಮ ವೊಂದರಲ್ಲಿ ಮಾತನಾಡಿದ್ದ ಸಚಿವ ವಿಜಯ್ ಶಾ ‘ಆಪರೇಷನ್ ಸಿಂಧೂರ’ ಕುರಿತು ಪ್ರಸ್ತಾಪಿಸಿದ್ದರು. ಅಲ್ಲದೇ, ಕರ್ನಲ್ ಸೋಫಿಯಾ ಅವರನ್ನು ‘ಭಯೋತ್ಪಾದಕರ ಸಹೋದರಿ’ ಎಂಬಂತಹ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎನ್ನಲಾಗಿದೆ.
ಶಾ ಹೇಳಿಕೆ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಬಳಿಕ ಎಚ್ಚೆತ್ತುಕೊಂಡ ಶಾ, ‘ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದಲ್ಲಿ, 10 ಬಾರಿ ಕ್ಷಮೆ ಯಾಚಿಸಲು ನಾನು ಸಿದ್ಧ. ಕರ್ನಲ್ ಖುರೇಷಿ ಅವರನ್ನು ನನ್ನ ಸಹೋದರಿಗಿಂತಲೂ ಹೆಚ್ಚು ಗೌರವಿಸುತ್ತೇನೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.