ADVERTISEMENT

ಬಿಹಾರ | ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್‌: ಸಿಎಂ, ಡಿಸಿಎಂ ವಿರುದ್ದ ದೂರು

ಪಿಟಿಐ
Published 16 ಜುಲೈ 2023, 6:02 IST
Last Updated 16 ಜುಲೈ 2023, 6:02 IST
ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌
ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌   

ಪಟ್ನಾ: ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ವಿಧಾನಸಭೆಯೆಡೆಗೆ ಮೆರವಣಿಗೆ ನಡೆಸುತ್ತಿದ್ದ ವೇಳೆ ಲಾಠಿ ಚಾರ್ಜ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಮತ್ತು ಇತರ ನಾಲ್ವರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಇತ್ತೀಚೆಗೆ, ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಕಾರ್ಯಕರ್ತ ಕೃಷ್ಣ ಸಿಂಗ್‌ ನೀಡಿರುವ ದೂರಿನಲ್ಲಿ ನಾಲ್ವರು ಆರೋಪಿಗಳ ಪೈಕಿ ಪಟ್ನಾದ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಮತ್ತು ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿಯ ಹೆಸರನ್ನೂ ದಾಖಲಿಸಲಾಗಿದೆ.

ವಕೀಲ ಸುನೀಲ್‌ ಕುಮಾರ್‌ ಸಿಂಗ್‌ ಅವರ ಮೂಲಕ ಪಟ್ನಾ ಸಿವಿಲ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದ್ದು, ಭಾರತೀಯ ದಂಡ ಸಂಹಿತೆಯ 302 (ಕೊಲೆ) ಮತ್ತು 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು) ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ವಿಚಾರಣೆಗಾಗಿ ನಾವು ಮನವಿ ಮಾಡಿದ್ದೇವೆ ಎಂದು ವಕೀಲರು ತಿಳಿಸಿದ್ದಾರೆ.

ADVERTISEMENT

‘ಮೆರವಣಿಗೆ ಶಾಂತಿಯುತವಾಗಿ ನಡೆಯುತ್ತಿತ್ತು. ಆದರೂ ಸಿಎಂ ಮತ್ತು ಡಿಸಿಎಂ ಸೇರಿದಂತೆ ಉನ್ನತ ಅಧಿಕಾರಿಗಳ ಸೂಚನೆ ಮೇರೆಗೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದಾರೆ. ಇದರಿಂದಾಗಿ ಬಿಜೆಪಿ ಕಾರ್ಯಕರ್ತ ವಿಜಯ್‌ ಸಿಂಗ್‌ ಗಾಯಗೊಂಡಿದ್ದರು’ ಎಂದು ಸಿಂಗ್‌ ಆರೋಪಿಸಿದರು.

ಗುರುವಾರ ವಿಧಾನಸಭೆಯೆಡೆಗೆ ನಡೆಸುತ್ತಿದ್ದ ಮೆರವಣಿಗೆ ವೇಳೆ ಪೊಲೀಸರು ನಡೆಸಿದ ‘ಕ್ರೂರ’ ಲಾಠಿ ಚಾರ್ಜ್‌ನಲ್ಲಿ ಗಾಯಗೊಂಡಿದ್ದರಿಂದಾಗಿಯೇ ಜೆಹನಾಬಾದ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್‌ ಸಿಂಗ್‌ ಮೃತಪಟ್ಟಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.