ನವದೆಹಲಿ: ಮಾಜಿ ಶಾಸಕಿ ಅಲ್ಕಾ ಲಂಬಾ (49) ಅವರು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಅತಿಶಿ ಅವರ ವಿರುದ್ಧ ಕಣಕ್ಕಿಳಿಯಲಿದ್ದಾರೆ ಎಂದು ಕಾಂಗ್ರೆಸ್ ಶುಕ್ರವಾರ ಘೋಷಿಸಿದೆ.
ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯೂ ಆಗಿರುವ ಲಂಬಾ ಹಾಗೂ ಅತಿಶಿ, ಕಲ್ಕಾಜಿ ಕ್ಷೇತ್ರದಲ್ಲಿ ಮುಖಾಮುಖಿಯಾಗಲಿದ್ದಾರೆ.
20 ವರ್ಷ ಕಾಂಗ್ರೆಸ್‌ನಲ್ಲಿದ್ದ ಲಂಬಾ, 2014ರಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಸೇರಿ, 2015ರಿಂದ 2019ರ ವರೆಗೆ ಶಾಸಕಿಯಾಗಿದ್ದರು. ಆದರೆ, ರಾಜೀವ್ ಗಾಂಧಿ ಅವರಿಗೆ ನೀಡಲಾಗಿರುವ ಭಾರತ ರತ್ನವನ್ನು ಕೇಂದ್ರ ಸರ್ಕಾರ ಹಿಂಪಡೆಯುವಂತೆ ಎಎಪಿ ಸರ್ಕಾರ ನಿರ್ಣಯ ಅಂಗೀಕರಿಸಿದ್ದರಿಂದ ಅಸಮಾಧಾನಗೊಂಡ ಅವರು, 2019ರಲ್ಲಿ ಪುನಃ ಕಾಂಗ್ರೆಸ್‌ಗೆ ಸೇರಿದ್ದಾರೆ.
70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿಯಲ್ಲಿ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷ ಈವರೆಗೆ 48 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಉಳಿದ 22 ಕ್ಷೇತ್ರಗಳಿಗೆ ಶೀಘ್ರದಲ್ಲೇ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.