
ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಕೃಪೆ: ಪಿಟಿಐ
ನವದೆಹಲಿ: ಭಾರತ ಇರಾನ್ ಬದಲಿಗೆ ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಮೋದಿ ಸರ್ಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ಅಧ್ಯಕ್ಷ ಟ್ರಂಪ್ ಅವರು ನಮ್ಮ(ಭಾರತ) ಸರ್ಕಾರ ಏನು ಮಾಡಿದೆ ಅಥವಾ ಮಾಡಲಿದೆ ಎಂಬುದರ ಕುರಿತು ಮಾಹಿತಿಯನ್ನು ನೀಡುತ್ತಲೇ ಇದ್ದಾರೆ ಎಂದು ಕುಟುಕಿದೆ.
ಏರ್ ಫೋರ್ಸ್ ಒನ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಚೀನಾದೊಂದಿಗೆ ತೈಲ ಒಪ್ಪಂದವನ್ನು ನಾವು ಸ್ವಾಗತಿಸುತ್ತೇವೆ. ಅಲ್ಲದೇ ವೆನೆಜುವೆಲಾದಿಂದ ತೈಲ ಖರೀದಿಗೆ ಭಾರತ ಒಪ್ಪಿಗೆ ಸೂಚಿಸಿದೆ. ನಾವು ಈಗಾಗಲೇ ಒಪ್ಪಂದ ಮಾಡಿಕೊಂಡಿದ್ದೇವೆ. ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂದು ಹೇಳಿದ್ದಾರೆ.
ಈ ಆಡಿಯೊವನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಮೋದಿ ಸರ್ಕಾರದ ವಿದುದ್ಧ ವಾಗ್ದಾಳಿ ನಡೆಸಿದ್ದಾರೆ.
'ಭಾರತ–ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ' ಎಂದು ಟ್ರಂಪ್ ಅವರು ಹಲವು ಬಾರಿ ಹೇಳಿದ್ದಾರೆ. ಅಲ್ಲದೇ ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸಿದೆ ಎಂದೂ ಅವರು ನಮಗೆ ಹೇಳಿದ್ದರು. ಇದೀಗ ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂದು ಹೇಳುತ್ತಿದ್ದಾರೆ. ಒಟ್ಟಿನಲ್ಲಿ ನಮ್ಮ ಸರ್ಕಾರ ಏನು ಮಾಡಿದೆ ಅಥವಾ ಮಾಡಲಿದೆ ಎಂಬುದರ ಕುರಿತು ಅಮೆರಿಕ ಅಧ್ಯಕ್ಷ ಟ್ರಂಪ್ ನಮಗೆ ಮಾಹಿತಿಯನ್ನು ನೀಡುತ್ತಲೇ ಇದ್ದಾರೆ ಎಂದೂ ರಮೇಶ್ ಎಕ್ಸ್‌ನಲ್ಲಿ ಟೀಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.