ಕ್ಯಾಲಿಫೋರ್ನಿಯಾದಲ್ಲಿರುವ ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ ದೇವಾಲಯ
(ಚಿತ್ರ: baps.org)
ನವದೆಹಲಿ: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಹಿಂದೂ ದೇವಾಲಯವನ್ನು ವಿರೂಪಗೊಳಿಸಿರುವುದನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.
'ಅಮೆರಿಕದಲ್ಲಿ ಹಿಂದೂ ಸಮುದಾಯದ ಪವಿತ್ರ ಸ್ಥಳಗಳನ್ನು ಗುರಿಯಾಗಿಸಿಕೊಂಡು ನಡೆದ ಮತ್ತೊಂದು ಘಟನೆಯಲ್ಲಿ, ಕೆಲವು ಅಪರಿಚಿತ ವ್ಯಕ್ತಿಗಳು ಕ್ಯಾಲಿಫೋರ್ನಿಯಾದ ಬೋಚಸನ್ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆಯ (ಬಿಎಪಿಎಸ್) ದೇವಾಲಯವನ್ನು ಅಪವಿತ್ರಗೊಳಿಸಿದ್ದಾರೆ.
ಸ್ಯಾನ್ ಬರ್ನಾರ್ಡಿನೊ ಕೌಂಟಿಯ ಚಿನೋ ಹಿಲ್ಸ್ ನಗರದಲ್ಲಿರುವ ಶ್ರೀ ಸ್ವಾಮಿನಾರಾಯಣ ಮಂದಿರವನ್ನು ಭಾರತ ವಿರೋಧಿ ಬರಹಗಳೊಂದಿಗೆ ವಿರೂಪಗೊಳಿಸಲಾಗಿದೆ ಎಂದು ಬಿಎಪಿಎಸ್ ಹೇಳಿದೆ.
'ಕ್ಯಾಲಿಫೋರ್ನಿಯಾದ ಚಿನೋ ಹಿಲ್ಸ್‌ನಲ್ಲಿರುವ ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ ಮಂದಿರವನ್ನು ವಿರೂಪಗೊಳಿಸಲಾಗಿದೆ. ಇಂತಹ ಕೃತ್ಯವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ' ಎಂದು ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಹೇಳಿದ್ದಾರೆ.
'ದ್ವೇಷ ಮತ್ತು ಅಸಹಿಷ್ಣುತೆಯ ಇಂತಹ ಕೃತ್ಯಗಳು ಸ್ವೀಕಾರಾರ್ಹವಲ್ಲ. ಯಾವುದೇ ನಾಗರಿಕ ಸಮಾಜದಲ್ಲಿ ಅವುಗಳಿಗೆ ಸ್ಥಾನವಿಲ್ಲ' ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಮಹಾತ್ಮ ಗಾಂಧಿ ಅವರ 'ಸರ್ವ ಧರ್ಮ ಸಮಭಾವ' ಪರಿಕಲ್ಪನೆಯನ್ನು ಕಾಂಗ್ರೆಸ್ ತಲೆಮಾರುಗಳಿಂದ ಎತ್ತಿಹಿಡಿದಿದೆ ಎಂದ ಅವರು, ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
'ಈ ಬಾರಿ ಕ್ಯಾಲಿಫೋರ್ನಿಯಾದ ಚಿನೋ ಹಿಲ್ಸ್‌ನಲ್ಲಿ ಮತ್ತೊಂದು ಮಂದಿರ ಹಾನಿಗೊಳಗಾಗಿದ್ದು, ಹಿಂದೂ ಸಮುದಾಯವು ದ್ವೇಷದ ವಿರುದ್ಧ ದೃಢವಾಗಿ ನಿಂತಿದೆ. ಚಿನೋ ಹಿಲ್ಸ್ ಮತ್ತು ದಕ್ಷಿಣ ಕ್ಯಾಲಿಫೋರ್ನಿಯಾದ ಸಮುದಾಯದೊಂದಿಗೆ ಎಂದಿಗೂ ದ್ವೇಷ ಬೇರೂರಲು ನಾವು ಬಿಡುವುದಿಲ್ಲ' ಎಂದು ಬಿಎಪಿಎಸ್ ಸಾರ್ವಜನಿಕ ವ್ಯವಹಾರಗಳ ವಿಭಾಗ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.