ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಜಿ ವಿಜಯನ್
ಕೊಚ್ಚಿ: ಇಡೀ ರಾಷ್ಟ್ರವೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ದುಃಖದಲ್ಲಿರುವಾಗ ಮುಖ್ಯಮಂತ್ರಿ ಪಿಣರಾಜಿ ವಿಜಯನ್ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ ಎಂದು ಕಾಂಗ್ರೆಸ್ ಶನಿವಾರ ಟೀಕಿಸಿದೆ.
ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿರುವ ವಿಧಾನಸಭೆ ವಿರೋಧ ಪಕ್ಷದ ವಿ.ಡಿ. ಸತೀಶನ್, ಮುಖ್ಯಮಂತ್ರಿಯವರು 'ಅಗೌರವ' ಹಾಗೂ 'ಅನುಚಿತ' ವರ್ತನೆ ತೋರಿದ್ದಾರೆ ಎಂದು ಕಿಡಿಕಾರಿದ್ದಾರೆ.
'ಹತ್ತು ವರ್ಷ ದೇಶದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯುತ್ತಿರುವಾಗ, ಮುಖ್ಯಮಂತ್ರಿಯವರು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಅಗೌರವ ಹಾಗೂ ಅನುಚಿತ ನಡೆ' ಎಂದು ಸತೀಶನ್ ಟೀಕಿಸಿದ್ದಾರೆ.
'ಮುಖ್ಯಮಂತ್ರಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಬಾರದಿತ್ತು. ಕಾರ್ಯಕ್ರಮವನ್ನು ಮುಂದೂಡುವಂತೆ ಹಾಗೂ ಸಿಎಂಗೆ ಮಾಹಿತಿ ನೀಡುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮನವಿ ಮಾಡಿದ್ದೆವು' ಎಂದೂ ಹೇಳಿದ್ದಾರೆ.
ಮುಖ್ಯಮಂತ್ರಿ ಅವರು ತೋರಿದ ಅಗೌರವದ ಬಗ್ಗೆ ನೋವು ತೋಡಿಕೊಂಡ ಸತೀಶನ್, ಆಕ್ಷೇಪವನ್ನೂ ವ್ಯಕ್ತಪಡಿಸಿದರು.
ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಸಿಐಎಲ್) ವತಿಯಿಂದ ನಿರ್ಮಿಸಿರುವ ತಾಜ್ ಕೊಚ್ಚಿನ್ ಪಂಚತಾರಾ ಹೋಟೆಲ್ ಅನ್ನು ವಿಜಯನ್ ಅವರು ಇಂದು ಉದ್ಘಾಟಿಸಿದರು.
ಮನಹೋಹನ್ ಸಿಂಗ್ ಅವರ ಅಂತ್ಯಕ್ರಿಯೆಯು ಸಕಲ ಸರ್ಕಾರಿ ಗೌರವಗಳೊಂದಿಗೆ ನವದೆಹಲಿಯಲ್ಲಿ ಇಂದು ನೆರವೇರಿತು.
ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ಅಂತಿಮ ಗೌರವ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.