ADVERTISEMENT

ಬೆಳಗಾವಿ ಅಧಿವೇಶನದ ಶತಮಾನೋತ್ಸವ | ಗುರುವಾರ CWC ಸಭೆ: 2025ಕ್ಕೆ ಕಾರ್ಯಸೂಚಿ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2024, 15:54 IST
Last Updated 24 ಡಿಸೆಂಬರ್ 2024, 15:54 IST
<div class="paragraphs"><p>ಕೆ.ಸಿ.ವೇಣುಗೋಪಾಲ್‌</p></div>

ಕೆ.ಸಿ.ವೇಣುಗೋಪಾಲ್‌

   

ನವದೆಹಲಿ: ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಸ್ಮರಣಾರ್ಥ ಬೆಳಗಾವಿಯಲ್ಲಿ ಗುರುವಾರ ನಡೆಯಲಿರುವ ವಿಸ್ತೃತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯು 2025ಕ್ಕೆ ಪಕ್ಷದ ಕಾರ್ಯಸೂಚಿ ರೂಪಿಸಲಿದೆ. 

‘ನವ ಸತ್ಯಾಗ್ರಹ ಬೈಠಕ್‌’ ಹೆಸರಿನಲ್ಲಿ ನಡೆಯುವ ಈ ಸಭೆಯಲ್ಲಿ ಸುಮಾರು 200 ನಾಯಕರು ಭಾಗಿಯಾಗಲಿದ್ದಾರೆ.  ಶುಕ್ರವಾರ 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್' ರ‍್ಯಾಲಿ ನಡೆಯಲಿದೆ. ಇದರಲ್ಲಿ ಪಕ್ಷದ ಸಂಸದರು ಮತ್ತು  ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ADVERTISEMENT

ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್‌, ‘ಸಂವಿಧಾನಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಡಿರುವ ಅವಮಾನದ ಕುರಿತು ಚರ್ಚಿಸಲಾಗುತ್ತದೆ. ಸಭೆ ನಡೆಯುವ ಸ್ಥಳಕ್ಕೆ ‘ಮಹಾತ್ಮ ಗಾಂಧಿ ನಗರ’ ಎಂದು ಹೆಸರಿಡಲಾಗಿದೆ’ ಎಂದರು. ಅಮಿತ್ ಶಾ ಅವರು ದೇಶದ ಕ್ಷಮೆಯಾಚಿಸಬೇಕು ಹಾಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು. 

‘ದೇಶದ ರಾಜಕೀಯ ಮತ್ತು ಆರ್ಥಿಕ ಪರಿಸ್ಥಿತಿಯ ಬಗ್ಗೆ ಪಕ್ಷದ ನಿಲುವನ್ನು ಒಳಗೊಂಡಿರುವ ಎರಡು ನಿರ್ಣಯಗಳನ್ನು ಸಿಡಬ್ಲ್ಯುಸಿ ಅಂಗೀಕರಿಸಲಿದೆ. ಬಿಜೆಪಿ ಆಡಳಿತದಲ್ಲಿ ದೇಶವು ಎದುರಿಸುತ್ತಿರುವ ನಿರ್ಣಾಯಕ ಸವಾಲುಗಳ ಬಗ್ಗೆ ಚರ್ಚಿಸಲಾಗುತ್ತದೆ. ಇದರಲ್ಲಿ ಬೆಳೆಯುತ್ತಿರುವ ಆರ್ಥಿಕ ಅಸಮಾನತೆ ಮತ್ತು ಸಂವಿಧಾನದ ಮೇಲಿನ ದಾಳಿ ಸೇರಿವೆ’ ಎಂದು ವೇಣುಗೋಪಾಲ್ ಹೇಳಿದರು.

ಮಹಾತ್ಮಾ ಗಾಂಧೀಜಿ ಅವರು ಮೊದಲ ಮತ್ತು ಕೊನೆಯ ಬಾರಿಗೆ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿ ಸರಿಯಾಗಿ 100 ವರ್ಷಗಳ ನಂತರ ನಡೆಯುತ್ತಿರುವ ಬೆಳಗಾವಿ ಅಧಿವೇಶನದ ಪ್ರಾಮುಖ್ಯತೆ ಬಗ್ಗೆ ಮತ್ತೊಂದು ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. 

ಗುರುವಾರ ಮಧ್ಯಾಹ್ನ 2.30ಕ್ಕೆ ಆರಂಭವಾಗಲಿರುವ ಸಭೆಯಲ್ಲಿ ಸಿಡಬ್ಲ್ಯುಸಿ ಸದಸ್ಯರಲ್ಲದೆ, ಕೇಂದ್ರ ಚುನಾವಣಾ ಸಮಿತಿ ಸದಸ್ಯರು, ರಾಜ್ಯ ಘಟಕಗಳ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಮತ್ತು ಮಾಜಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಪಕ್ಷದ ಮುಂದಿನ ಒಂದು ವರ್ಷದ ಕಾರ್ಯಕ್ರಮಗಳ ಕುರಿತು ಸಿಡಬ್ಲ್ಯುಸಿ ಚರ್ಚೆ ನಡೆಸಲಿದೆ ಎಂದರು.

ಪಕ್ಷದ ಸಂಘಟನೆಯಲ್ಲಿ ಬದಲಾವಣೆ ಬಗ್ಗೆ ಸಿಡಬ್ಲ್ಯುಸಿಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗುತ್ತದೆಯೇ ಎಂಬ ಪ್ರಶ್ನೆಗೆ ವೇಣುಗೋಪಾಲ್‌, ‘2025ರಲ್ಲಿ ಸಂಘಟನೆಯ ಪುನರ್‌ ರಚನೆ ಮಾಡಲು ಹಿಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ’ ಎಂದರು. 

ಉದಯಪುರ ಚಿಂತನ ಶಿಬಿರದಲ್ಲಿ ಕೈಗೊಂಡ ಏಳು ಪ್ರಮುಖ ನಿರ್ಧಾರಗಳ ಪೈಕಿ ನಾಲ್ಕನ್ನು ಕಾಂಗ್ರೆಸ್ ಜಾರಿಗೊಳಿಸಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್‌ ರಮೇಶ್‌, ‘ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯವರು ಸಂವಿಧಾನ ಬದಲಾಯಿಸಲು ಬಯಸುತ್ತಿದ್ದಾರೆ. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ವರ್ತಿಸುತ್ತಿದ್ದಾರೆ’ ಎಂದು ಆರೋಪಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.