ADVERTISEMENT

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಸರ್ಕಾರ ಸ್ಪಷ್ಟನೆ ನೀಡಲಿ: ಕಾಂಗ್ರೆಸ್

ಪಿಟಿಐ
Published 25 ಜುಲೈ 2025, 15:29 IST
Last Updated 25 ಜುಲೈ 2025, 15:29 IST
ಬೃಂದಾ ಕಾರಟ್
ಬೃಂದಾ ಕಾರಟ್   

ನವದೆಹಲಿ: ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯಲಿದೆಯೇ, ಇಲ್ಲವೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸುತ್ತಿಲ್ಲ ಎಂದು ಕಾಂಗ್ರೆಸ್‌ ಶುಕ್ರವಾರ ದೂರಿದೆ.

ಸೋಮವಾರದಿಂದ ಸಂಸತ್‌ ಕಲಾಪ ಸುಗಮವಾಗಿ ನಡೆಸುವ ಉದ್ದೇಶದಿಂದ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರು ಶುಕ್ರವಾರ ವಿವಿಧ ಪಕ್ಷಗಳ ಹಿರಿಯ ನಾಯಕರ ಜೊತೆ ಸಭೆ ನಡೆಸಿದರು.

ಸಭೆಯ ಬಳಿಕ ಮಾತನಾಡಿದ ಕಾಂಗ್ರೆಸ್‌ ನಾಯಕ ಗೌರವ್‌ ಗೊಗೊಯ್, ‘ನಾವು ಪಹಲ್ಗಾಮ್ ಮತ್ತು ಆಪರೇಷನ್ ಸಿಂಧೂರ ವಿಷಯವನ್ನು ಸದನದಲ್ಲಿ ಎತ್ತಲಿಲ್ಲ. ಏಕೆಂದರೆ, ಈ ವಿಷಯಗಳ ಕುರಿತ ಚರ್ಚೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ಇರಬೇಕೆಂದು ನಾವು ಒತ್ತಾಯಿಸಿದ್ದೆವು. ಆದರೆ ಅವರು ವಿದೇಶದಲ್ಲಿರುವುದರಿಂದ ಸದನದಲ್ಲಿ ಈಗ ಚರ್ಚೆ ಸಾಧ್ಯವಿಲ್ಲ’ ಎಂದು ಹೇಳಿದರು.

ADVERTISEMENT

‘ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿಷಯವನ್ನು ಸದನದಲ್ಲಿ ಚರ್ಚಿಸಬೇಕೆಂದು ನಾವು ಒತ್ತಾಯಿಸುತ್ತಿದ್ದೆವು. ಆದರೆ ಸರ್ಕಾರ ಏನನ್ನೂ ಸ್ಪಷ್ಟಪಡಿಸುತ್ತಿಲ್ಲ. ತಾಂತ್ರಿಕ ಕಾರಣಗಳನ್ನು ನೀಡಿ ಚರ್ಚೆಯಿಂದ ನುಣುಚಿಕೊಳ್ಳುತ್ತಿದೆ’ ಎಂದಿದ್ದಾರೆ. 

‘ಚುನಾವಣಾ ಆಯೋಗವು ಈ ಪ್ರಕ್ರಿಯೆ ನಡೆಸುತ್ತಿರುವುದರಿಂದ ಚರ್ಚೆ ಸಾಧ್ಯವಿಲ್ಲ ಎಂದು ಸರ್ಕಾರ ನೆಪ ಹೇಳುತ್ತಿದೆ. ಹಾಗಾದಲ್ಲಿ, ನಮ್ಮ ಪ್ರಶ್ನೆಗಳಿಗೆ ಯಾರು ಉತ್ತರಿಸುತ್ತಾರೆ’ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್‌ ಉಪನಾಯಕರೂ ಆಗಿರುವ ಗೊಗೊಯ್‌ ಪ್ರಶ್ನಿಸಿದ್ದಾರೆ.

ಪ್ರಜಾಪ್ರಭುತ್ವದ ಮೇಲಿನ ದಾಳಿ: ಬೃಂದಾ

‘ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಪ್ರಜಾಪ್ರಭುತ್ವದ ಹಕ್ಕುಗಳು ಮತ್ತು ಸಾಂವಿಧಾನಿಕ ಮೌಲ್ಯಗಳ ಮೇಲಿನ ದಾಳಿ’ ಎಂದು ಸಿಪಿಎಂನ ಹಿರಿಯ ನಾಯಕಿ ಬೃಂದಾ ಕಾರಟ್‌ ಟೀಕಿಸಿದ್ದಾರೆ. ಚುನಾವಣಾ ಆಯೋಗದ ಮೂಲಕ ಬಿಹಾರದಲ್ಲಿ ಮತದಾರರ ಪಟ್ಟಿಯ ದೊಡ್ಡ ಪ್ರಮಾಣದ ಪರಿಷ್ಕರಣೆ ನಡೆಸುವ ಮೂಲಕ ಬಿಜೆಪಿಯು ಅಕ್ರಮ ಎಸಗಲು ಮುಂದಾಗಿದೆ ಎಂದು ಶುಕ್ರವಾರ ಆರೋಪಿಸಿದ್ದಾರೆ. ಚುನಾವಣಾ ಆಯೋಗವು ಬಿಜೆಪಿಯ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದೆ ಎಂದು ದೂರಿದ ಅವರು ‘ಬಿಜೆಪಿಗೆ ಬಿಹಾರ ಚುನಾವಣೆಯಲ್ಲಿ ಸೋಲಿನ ಭೀತಿ ಎದುರಾಗಿದೆ. ಆದ್ದರಿಂದ ಚುನಾವಣಾ ಆಯೋಗದ ಮೂಲಕ ಇಷ್ಟು ಕಡಿಮೆ ಅವಧಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಸೂಚಿಸಿದ್ದಾರೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.