ನವದೆಹಲಿ: ಪಹಲ್ಗಾಮ್ ದಾಳಿ, ಟ್ರಂಪ್ ಹೇಳಿಕೆ, ಆಪರೇಷನ್ ಸಿಂಧೂರ ಕುರಿತಂತೆ ಕಾಂಗ್ರೆಸ್ ಪಕ್ಷದ ಮುಂಗಾರು ಅಧಿವೇಶನದಲ್ಲಿ ಚರ್ಚೆ ನಡೆಸಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಮುಂಗಾರು ಸಂಸತ್ ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿ ಪ್ರಮುಖ ವಿಷಯಗಳನ್ನು ಅಂತಿಮಗೊಳಿಸಲು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಲಿದ್ದಾರೆ.
ಈ ಸಭೆ ಜುಲೈ 15ರಂದು ನಡೆಯಲಿದೆ ಎಂದು ಕಾಂಗ್ರೆಸ್ ವಕ್ತಾರರು ಹೇಳಿದ್ದಾರೆ.
ಜನಪಥ ನಿವಾಸದಲ್ಲಿ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಪ್ರಮುಖ ನಾಯಕರು, ಹಿರಿಯ ಸಂಸದರು, ವಕ್ತಾರರು ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ’, ಪಹಲ್ಗಾಮ್ ದಾಳಿ, ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿಕೆ, ಆಪರೇಷನ್ ಸಿಂಧೂರ ಹಾಗೂ ಆನಂತರದ ರಾಜತಾಂತ್ರಿಕ ಪರಿಣಾಮದ ಕುರಿತು ಚರ್ಚೆಗೆ ಕಾಂಗ್ರೆಸ್ ಒತ್ತಾಯಿಸಲಿದೆ ಎಂದು ಮೂಲಗಳು ತಿಳಿಸಿವೆ.
ಇದು ವಿರೋಧ ಪಕ್ಷ ಹಾಗೂ ಸರ್ಕಾರದ ನಡುವೆ ಹಲವು ವಿಷಯಗಳಲ್ಲಿ ಸಂಘರ್ಷಕ್ಕೆ ಸಾಕ್ಷಿಯಾಗುವ ಸಾಧ್ಯತೆ ಇದೆ. ಸಂಸತ್ ಮುಂಗಾರು ಅಧಿವೇಶನ ಸುಮಾರು ಒಂದು ತಿಂಗಳ ಕಾಲ ನಡೆಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.