
ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ವೇಳೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ 43 ನಾಯಕರಿಗೆ ನೋಟಿಸ್ ನೀಡಲಾಗಿದೆ ಎಂದು ಕಾಂಗ್ರೆಸ್ ಪಕ್ಷವು ಮಂಗಳವಾರ ತಿಳಿಸಿದೆ.
ಚುನಾವಣೆಯ ವೇಳೆ ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡಿದ್ದ ನಾಯಕರಿಗೆ ಕಾಂಗ್ರೆಸ್ ಪಕ್ಷದ ಶಿಸ್ತು ಸಮಿತಿಯು ನೋಟಿಸ್ ನೀಡಿದೆ.
ಮಾಜಿ ಸಚಿವೆ ವೀಣಾ ಶಾಹಿ, ಎಐಸಿಸಿ ಸದಸ್ಯ ಮಧುರೇಂದ್ರ ಕುಮಾರ್ ಸಿಂಗ್, ರಾಜ್ಯ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಕೈಸರ್ ಖಾನ್, ಮಾಜಿ ಶಾಸಕ ಸುಧೀರ್ ಕುಮಾರ್ ಹಾಗೂ ಮಾಜಿ ಎಂಎಲ್‌ಸಿ ಅಜಯ್ ಕುಮಾರ್ ಸಿಂಗ್ ಸೇರಿದಂತೆ ಕೆಲವು ಮಾಜಿ ಸಚಿವರಿಗೂ ಕೂಡ ನೋಟಿಸ್ ನೀಡಲಾಗಿದೆ.
ಪಕ್ಷದ 43 ನಾಯಕರಿಗೆ ನೋಟಿಸ್ ನೀಡಲಾಗಿದ್ದು, ನವೆಂಬರ್ 21ರೊಳಗೆ ಲಿಖಿತ ಉತ್ತರವನ್ನು ನೀಡುವಂತೆ ಸೂಚಿಸಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿಯ ಅಧ್ಯಕ್ಷ ಕಪಿಲ್ ದೇವ್ ಪ್ರಸಾದ್ ಯಾದವ್ ಅವರು ಹೇಳಿದ್ದಾರೆ.
ಒಂದು ವೇಳೆ ಸಮಯದ ಒಳಗಾಗಿ ಲಿಖಿತ ಉತ್ತರ ನೀಡದಿದ್ದರೆ, ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಹೊರಗಿಡಲಾಗುತ್ತದೆ ಎಂದು ತಿಳಿಸಲಾಗಿದೆ.
243 ಸದಸ್ಯ ಬಲದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೇವಲ 6 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.