ಅಶ್ವಿನಿ ವೈಷ್ಣವ್
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಇದು ಪಕ್ಷದ ಬೂಟಾಟಿಕೆಯ ಪರಮಾವಧಿಯಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಕಾಂಗ್ರೆಸ್ ಅವರನ್ನು ಕಡೆಗಣಿಸಿತ್ತು. ಸಿಂಗ್ ಅವರ ಅಂತಿಮಯಾತ್ರೆ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್‌ನ ಬೂಟಾಟಿಕೆಯು ಬಹಿರಂಗವಾಗಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.
‘ಆರ್ಥಿಕ ಸುಧಾರಣೆಗಳ ಶಿಲ್ಪಿ, ಮಾಜಿ ಪ್ರಧಾನಿ ಪಿ.ವಿ ನರಸಿಂಹ ರಾವ್ ಅವರಿಗೆ ಸ್ಮಾರಕ ನಿರ್ಮಾಣ ಮಾಡಲು ಕಾಂಗ್ರೆಸ್ ನಿರಾಕರಿಸಿತ್ತು. ಅಲ್ಲದೆ, ಎಐಸಿಸಿ ಪ್ರಧಾನ ಕಚೇರಿಯ ಮೂಲಕ ರಾವ್ ಅವರ ಅಂತಿಮಯಾತ್ರೆ ನಡೆಸುವುದನ್ನು ನಿರಾಕರಿಸಿತ್ತು. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನಿಧನರಾದ ಬಳಿಕ ಅವರನ್ನು ಗೌರವಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ’ ಎಂದು ವೈಷ್ಣವ್ ಹೇಳಿದ್ದಾರೆ.
‘ಭಾರತಮಾತೆಯ ಮಹಾನ್ ಪುತ್ರ ಹಾಗೂ ಸಿಖ್ ಸಮುದಾಯದ ಮೊದಲ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆಯನ್ನು ನಿಗಮ್‌ಬೋಧ್ ಘಾಟ್‌ನಲ್ಲಿ ನೆರವೇರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅವರಿಗೆ ತೀವ್ರ ಅವಮಾನ ಮಾಡಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.