ADVERTISEMENT

SIR ವಿರೋಧಿಸಿ ಸೋನಿಯಾ ನೇತೃತ್ವದಲ್ಲಿ ‘ಇಂಡಿಯಾ’ ಪಕ್ಷಗಳ ಸಂಸದರ ಪ್ರತಿಭಟನೆ

ಪಿಟಿಐ
Published 31 ಜುಲೈ 2025, 6:18 IST
Last Updated 31 ಜುಲೈ 2025, 6:18 IST
   

ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ವಿರೋಧಿಸಿ ಸತತ ಎಂಟನೇ ದಿನ ಇಂಡಿಯಾ ಬಣದ ಸಂಸದರು ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ.

ಸಂಸತ್ ಕಲಾಪ ಆರಂಭಕ್ಕೂ ಮುನ್ನ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಮತ್ತು ಎಸ್‌ಪಿ ವರಿಷ್ಠ ಅಖಿಲೇಶ್ ಯಾದವ್ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆಯಿಂದ ಹಿಂದೆಸರಿಯಬೇಕೆಂದು ಸಂಸದರು ಒತ್ತಾಯಿಸಿದರು.

ADVERTISEMENT

ಸಂಸತ್ತಿನ ಮಕರ ದ್ವಾರದ ಮೆಟ್ಟಿಲುಗಳ ಬಳಿ ಸಾಲುಗಟ್ಟಿ ನಿಂತಿದ್ದ ಸಂಸದರು ‘ಎಸ್‌ಐಆರ್–ಲೋಕತಂತ್ರ ಪೇ ವಾರ್' ಎಂದು ಬರೆದ ಬೃಹತ್ ಬ್ಯಾನರ್ ಪ್ರದರ್ಶಿಸಿದರು.

ಚುನಾವಣಾ ಆಯೋಗ ಮತ್ತು ಸರ್ಕಾರ ಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸಿದ ಅವರು, ಸ್ಟಾಪ್ ಎಸ್‌ಐಆರ್ ಎಂಬ ಫಲಕಗಳನ್ನು ಹಿಡಿದಿದ್ದರು. ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಸಮಾಜವಾದಿ ಪಕ್ಷ, ಆರ್‌ಜೆಡಿ ಮತ್ತು ಎಡ ಪಕ್ಷಗಳ ಸದಸ್ಯರು ಸೇರಿದಂತೆ ವಿರೋಧ ಪಕ್ಷದ ಹಲವಾರು ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿ ಘೋಷಣೆಗಳನ್ನು ಕೂಗಿದರು.

ವಿಧಾನಸಭಾ ಚುನಾವಣೆಗೆ ಮುನ್ನ ಬಿಹಾರದಲ್ಲಿ ಹಲವು ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಗುರಿಯನ್ನು ಚುನಾವಣಾ ಆಯೋಗ ಹೊಂದಿದೆ ಎಂದು ಆರೋಪಿಸಿ, ಎಸ್‌ಐಆರ್ ವಿರುದ್ಧ ಸಂಸತ್ತಿನ ಎರಡೂ ಸದನಗಳಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಈ ವಿಷಯದ ಬಗ್ಗೆ ಎರಡೂ ಸದನಗಳಲ್ಲಿ ಚರ್ಚೆ ನಡೆಸಬೇಕೆಂದು ಅವರು ಒತ್ತಾಯಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.