ADVERTISEMENT

ಹಾಥರಸ್ ಅನ್ಯಾಯದ ಕುರಿತು ಪ್ರತಿ ಭಾರತೀಯನೂ ಅರಿಯಬೇಕಿದೆ: ರಾಹುಲ್‌ ಗಾಂಧಿ

ಏಜೆನ್ಸೀಸ್
Published 8 ಅಕ್ಟೋಬರ್ 2020, 3:06 IST
Last Updated 8 ಅಕ್ಟೋಬರ್ 2020, 3:06 IST
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ   

ನವದೆಹಲಿ: ಉತ್ತರ ಪ್ರದೇಶದ ಹಾಥರಸ್‌ನಲ್ಲಿ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯ ತನಿಖೆಯನ್ನು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.

ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ಸಿಬಿಐಗೆ ಪ್ರಕರಣದ ತನಿಖೆಯನ್ನು ಒಪ್ಪಿಸುವ ಮೂಲಕ ಜನರನ್ನು ಮೋಸಗೊಳಿಸಲು ಬಿಜೆಪಿ ಪ್ರಯತ್ನಿಸಬಾರದು ಎಂದು ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ಸಂದರ್ಭದ ವಿಡಿಯೊ ಅನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ADVERTISEMENT

ಐದು ನಿಮಿಷದ ವಿಡಿಯೊದಲ್ಲಿ ಸಂತ್ರಸ್ತೆಯ ಕುಟುಂಬದವರಿಗೆ ಬೆಂಬಲವನ್ನು ವ್ಯಕ್ತಪಡಿಸಿರುವ ರಾಹುಲ್‌, 'ಕುಟುಂಬದವರ ಧ್ವನಿಯನ್ನು ಯಾರಿಂದಲೂ ಹತ್ತಿಕ್ಕಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ.

'ಕುಟುಂಬ ಸದಸ್ಯರು ಯಾವುದೇ ಸಂದರ್ಭದಲ್ಲಿ ಗ್ರಾಮವನ್ನು ತೊರೆಯಬಾರದು. ಗ್ರಾಮದಿಂದ ಹೊರಹೋಗುವಂತೆ ಅವರ ಮೇಲೆ ಒತ್ತಡ ಹೇರಲು ಯಾರಿಂದಲೂ ಸಾಧ್ಯವಿಲ್ಲ. ಯಾರಾದರೂ ಹಾಗೆ ಮಾಡಲು ಮುಂದಾದರೆ, ನಾನು ಕುಟುಂಬದವರೊಂದಿಗೆ ನಿಲ್ಲುತ್ತೇನೆ' ಎಂದು ರಾಹುಲ್‌ ತಿಳಿಸಿದ್ದಾರೆ.

'ಉತ್ತರ ಪ್ರದೇಶ ಸರ್ಕಾರದಿಂದ ಶೋಷಣೆ ಮತ್ತು ದಬ್ಬಾಳಿಕೆಯನ್ನು ಎದುರಿಸುತ್ತಿರುವ ಹಾಥರಸ್‌ ಸಂತ್ರಸ್ತೆಯ ಕುಟುಂಬವನ್ನು ವೀಕ್ಷಿಸಿ. ಅವರಿಗೆ ಆಗಿರುವ ಅನ್ಯಾಯದ ಬಗೆಗಿನ ಸತ್ಯವನ್ನು ಪ್ರತಿಯೊಬ್ಬ ಭಾರತೀಯನೂ ಅರಿಯಬೇಕು' ಎಂದು ರಾಹುಲ್‌ ಹೇಳಿದ್ದಾರೆ.

ಮೂರು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾಗಿದ್ದ ಉತ್ತರ ಪ್ರದೇಶದ ಹಾಥರಸ್‌ನ 19 ವರ್ಷದ ಯುವತಿ ದೆಹಲಿಯಲ್ಲಿ ಮಂಗಳವಾರ ಮೃತಪಟ್ಟಿದ್ದರು. ಮೂಳೆ ಮುರಿತ ಮತ್ತು ನಾಲಿಗೆಯು ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದರು.

ಮೃತಪಟ್ಟ ಯುವತಿಯ ಅಂತ್ಯಕ್ರಿಯೆಯನ್ನು ಉತ್ತರ ಪ್ರದೇಶ ಪೊಲೀಸರು ನಡುರಾತ್ರಿಯಲ್ಲೇ ಮಾಡಿ ಮುಗಿಸಿದ್ದರು. ಅಂತ್ಯಕ್ರಿಯೆಗೆ ತೆರಳಲು ತಮಗೂ ಅವಕಾಶ ನೀಡಿರಲಿಲ್ಲ ಎಂದು ಸಂತ್ರಸ್ತೆಯ ಕುಟುಂಬ ಸದಸ್ಯರು ಆರೋಪಿಸಿದ್ದರು. ಈ ಘಟನೆಯು ದೇಶದಾದ್ಯಂತ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.