
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಎಂಟು ರಾಜ್ಯಗಳಲ್ಲಿ ಕಳಪೆ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸತ್ಯಶೋಧನಾ ಸಮಿತಿಗಳನ್ನು ರಚಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕ, ತೆಲಂಗಾಣ, ಹಿಮಾಚಲ ಪ್ರದೇಶ ಹಾಗೂ ಮಧ್ಯಪ್ರದೇಶ, ಛತ್ತೀಸಗಡ, ದೆಹಲಿ, ಉತ್ತರಾಖಂಡ, ಒಡಿಶಾ ರಾಜ್ಯಗಳಿಗೆ ಸಮಿತಿ ರಚಿಸಲಾಗಿದೆ. ಕರ್ನಾಟಕದ ಸಮಿತಿಯಲ್ಲಿ ಮಧುಸೂದನ್ ಮಿಸ್ತ್ರಿ, ಗೌರವ್ ಗೊಗೊಯ್ ಹಾಗೂ ಹಿಬಿ ಇಡೆನ್ ಇದ್ದಾರೆ. ಛತ್ತೀಸಗಢ ಸಮಿತಿಯಲ್ಲಿ ಹಿರಿಯ ಮುಖಂಡ ಎಂ. ವೀರಪ್ಪ ಮೊಯಿಲಿ ಇದ್ದಾರೆ.
ಕರ್ನಾಟಕದಲ್ಲಿ ಕನಿಷ್ಠ 17 ಕ್ಷೇತ್ರಗಳಲ್ಲಿ ಪಕ್ಷ ಗೆಲುವು ಸಾಧಿಸಲಿದೆ ಎಂದು ಹೈಕಮಾಂಡ್ ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ, 9 ಕ್ಷೇತ್ರಗಳಲ್ಲಿ ಮಾತ್ರ ಜಯ ಗಳಿಸಿತ್ತು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದ ಪಕ್ಷವು ಹಳೆ ಮೈಸೂರು ಭಾಗದಲ್ಲಿ ಕಳಪೆ ಪ್ರದರ್ಶನ ನೀಡಿತ್ತು. ಪಕ್ಷದ ಕಳಪೆ ಸಾಧನೆ ಬಗ್ಗೆ ಖರ್ಗೆ ಹಾಗೂ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪ್ರಾಬಲ್ಯ ಹೊಂದಿರುವ ಭಾಗಗಳಲ್ಲೇ ಪಕ್ಷಕ್ಕೆ ಹಿನ್ನಡೆಯಾಗಿರುವುದನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.