ADVERTISEMENT

ತೈಲ ಬೆಲೆ ಏರಿಕೆ ವಿರೋಧಿ ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2021, 21:35 IST
Last Updated 11 ಜೂನ್ 2021, 21:35 IST
ಅಮೃತಸರದಲ್ಲಿ ಶುಕ್ರವಾರ ಕಾಂಗ್ರೆಸ್‌ ಕಾರ್ಯಕರ್ತರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ಕಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. (ಪಿಟಿಐ ಚಿತ್ರ)
ಅಮೃತಸರದಲ್ಲಿ ಶುಕ್ರವಾರ ಕಾಂಗ್ರೆಸ್‌ ಕಾರ್ಯಕರ್ತರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ಕಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. (ಪಿಟಿಐ ಚಿತ್ರ)   

ನವದೆಹಲಿ: ತೈಲ ಬೆಲೆ ಏರಿಕೆ ವಿರೋಧಿಸಿ ಮತ್ತು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ವಿಧಿಸುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ದೇಶದ ವಿವಿಧೆಡೆ ಪ್ರತಿಭಟನೆ ನಡೆಸಿದರು.

ಪಕ್ಷದ ಹಿರಿಯ ನಾಯಕರು ದೇಶದಾದ್ಯಂತ ವಿವಿಧ ಸ್ಥಳಗಳಲ್ಲಿ ಪಕ್ಷದ ಕಾರ್ಯಕರ್ತರ ಜತೆ ಸೇರಿಕೊಂಡುಪೆಟ್ರೋಲ್ ಬಂಕ್‌ಗಳ ಬಳಿ ಸರ್ಕಾರದ ವಿರುದ್ಧ ಬಿತ್ತಿಫಲಕ ಪ್ರದರ್ಶಿಸಿ, ಘೋಷಣೆ ಹಾಕಿದರು. ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಜಿಡಿಪಿ ಕುಸಿಯುತ್ತಿದೆ. ನಿರುದ್ಯೋಗ ಹೆಚ್ಚಳವಾಗುತ್ತಿದೆ. ತೈಲ ಬೆಲೆ ಗಗನಕ್ಕೇರುತ್ತಿದೆ. ದೇಶವನ್ನು ಲೂಟಿ ಮಾಡಲುಬಿಜೆಪಿಗೆ ಇನ್ನೂ ಎಷ್ಟು ಮಾರ್ಗಗಳಿವೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟ್ಟರ್‌ನಲ್ಲಿ ಕಿಡಿಕಾರಿದರು.

ADVERTISEMENT

‘ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಜನವರಿ 1ರಿಂದ ₹45 ಏರಿಕೆ ಕಂಡಿದೆ. ಜನರನ್ನು ಲೂಟಿ ಮಾಡುತ್ತಿರುವುದಕ್ಕೆ ಇದಕ್ಕಿಂತ ಹೆಚ್ಚಿನ ನಿದರ್ಶನ ಬೇರೇನು ಬೇಕು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದರು.

ಪಕ್ಷದ ನಾಯಕರಾದ ಕೆ.ಸಿ. ವೇಣುಗೋಪಾಲ್ ಮತ್ತು ಶಕ್ತಿ ಸಿಂಗ್ ಗೋಹಿಲ್ ಕುದುರೆ ಗಾಡಿ ಏರಿ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣ ಸಮೀಪದ ಪೆಟ್ರೋಲ್ ಬಂಕ್ ತಲುಪಿ, ಪ್ರತಿಭಟಿಸಿದರು.

‘ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಮೇಲಿನ ತೆರಿಗೆ ₹9.20 ಇದ್ದದ್ದು, ಇದೀಗ ₹32ಕ್ಕೆ ತಲುಪಿದೆ. ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಅಬಕಾರಿ ಸುಂಕ ವಿಧಿಸುವುದನ್ನು ನಿಲ್ಲಿಸಬೇಕು. ತೈಲ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರಬೇಕು. ಇಂಧನ ಬೆಲೆ ಏರಿಕೆಯನ್ನು ಸರ್ಕಾರ ಸಂಪೂರ್ಣ ನಿಯಂತ್ರಿಸಬೇಕು’ ಎಂದು ವೇಣುಗೋಪಾಲ್ ಒತ್ತಾಯಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಖಾಸಗಿ ಭೇಟಿಗಾಗಿ ಶಿಮ್ಲಾದಲ್ಲಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಿರಲಿಲ್ಲ. ಆದರೆ ಅವರ ನಿರ್ದೇಶನದಂತೆ ಉತ್ತರಪ್ರದೇಶದ ಕಾಂಗ್ರೆಸ್ ನಾಯಕರು ಉತ್ಸಾಹದಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕೋವಿಡ್‌ 19 ಸಾಂಕ್ರಾಮಿಕದ ಕಾರಣಕ್ಕೆ ಪ್ರತಿಭಟನೆಗಳನ್ನು ನಿಷೇಧಿಸಿದ್ದರೂ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ದೇಶದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ದೆಹಲಿಯಲ್ಲಿ ಸದ್ಯ ಒಂದು ಲೀಟರ್ ಪೆಟ್ರೋಲ್ ಬೆಲೆ ₹95.85, ಡೀಸೆಲ್ ಬೆಲೆ ಲೀಟರ್‌ಗೆ ₹86.75 ಇದೆ. ಇನ್ನು ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ ಮತ್ತು ಲಡಾಕ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹100ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.