ಅಲಹಾಬಾದ್ ಹೈಕೋರ್ಟ್
ಪ್ರಯಾಗ್‌ರಾಜ್: ಸಂವಿಧಾನವು ಬಲವಂತದ ಮತಾಂತರವನ್ನು ಬೆಂಬಲಿಸುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತಿಳಿಸಿದೆ.
ಉತ್ತರ ಪ್ರದೇಶದ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆ 2021ರ ಅಡಿಯಲ್ಲಿ ನಾಲ್ವರ ವಿರುದ್ಧ ದಾಖಲಿಸಲಾದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೋದ್ ದಿವಾಕರ್, ಪ್ರತಿಯೊಬ್ಬರಿಗೂ ತಮ್ಮ ಧರ್ಮವನ್ನು ಮುಕ್ತವಾಗಿ ಪಾಲಿಸುವ ಹಕ್ಕನ್ನು ನೀಡಿದ್ದು, ಬಲವಂತದ ಅಥವಾ ಮೋಸದ ಮತಾಂತರವನ್ನು ಸಂವಿಧಾನ ಬೆಂಬಲಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಆರೋಪಿಗಳು ಹಣ ಮತ್ತು ಉಚಿತ ವೈದ್ಯಕೀಯ ಸೇವೆ ನೀಡುವ ಮೂಲಕ ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲು ಪ್ರಯತ್ನಿಸಿದ್ದರು ಎಂದು ದೂರು ದಾಖಲಿಸಲಾಗಿತ್ತು.
ಈ ಆರೋಪಿಗಳ ವಿರುದ್ಧ ಕೇಳಿಬಂದಿರುವ ಆರೋಪಗಳು ಗಂಭೀರ ಸ್ವರೂಪದಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆ 2021ರ ಕುರಿತು ಪ್ರತಿಕ್ರಿಯಿಸಿದ ನ್ಯಾಯಾಲಯ, ಸಂವಿಧಾನದ 25 ನೇ ವಿಧಿಗೆ ಅನುಗುಣವಾಗಿ ಸಾರ್ವಜನಿಕ ಸುವ್ಯವಸ್ಥೆ, ನೈತಿಕ ಸಮಗ್ರತೆ ಮತ್ತು ಸಮಾಜದ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಈ ಕಾನೂನನ್ನು ಜಾರಿಗೆ ತರಲಾಗಿದೆ ಎಂದು ಹೇಳಿದೆ.
'ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರಗೊಳ್ಳುವುದನ್ನು ತಡೆಯುವುದು ಈ ಕಾಯಿದೆಯ ಮುಖ್ಯ ಉದ್ದೇಶವಾಗಿದೆ. ಬಲವಂತ, ಅನಗತ್ಯ ಪ್ರಭಾವ, ಆಮಿಷ, ಮೋಸದ ವಿಧಾನಗಳ ,ಮೂಲಕ ಮತಾಂತರ ಮಾಡುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಸಾಮಾಜಿಕ ಸಾಮರಸ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ' ಎಂದು ನ್ಯಾಯಾಲಯ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.