ಅಮಿತ್ ಶಾ ಹಾಗೂ ರಾಹುಲ್ ಗಾಂಧಿ
ಪಿಟಿಐ ಚಿತ್ರಗಳು
ನವದೆಹಲಿ: ‘ರಾಜ್ಯಸಭೆಯಲ್ಲಿ ಅಂಬೇಡ್ಕರ್ ಅವರ ಬಗ್ಗೆ ಅವಮಾನಕರ ಹೇಳಿಕೆ ನೀಡಿರುವ ಗೃಹ ಸಚಿವ ಅಮಿತ್ ಶಾ ಅವರು ಈ ಕೂಡಲೇ ಕ್ಷಮೆಯಾಚಿಸಬೇಕು’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
‘ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವುದನ್ನು ಈ ದೇಶ ಸಹಿಸುವುದಿಲ್ಲ’ ಎಂದು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ರಾಹುಲ್, ‘ಸಂವಿಧಾನ ಶಿಲ್ಪಿ ಅಂಬೇಡ್ಕರ್ ದೇಶಕ್ಕೆ ಹೊಸ ದಿಕ್ಕು ತೋರಿಸಿದವರು. ಅಂಬೇಡ್ಕರ್ ಅವರಿಗೆ ಅಥವಾ ಅವರು ರಚಿಸಿರುವ ಸಂವಿಧಾನಕ್ಕೆ ಅವಮಾನ ಮಾಡಿದರೆ ಈ ದೇಶದ ಜನ ಸಹಿಸುವುದಿಲ್ಲ. ತಕ್ಷಣ ಗೃಹ ಸಚಿವರು ಕ್ಷಮೆಯಾಚಿಸಬೇಕು’ ಎಂದು ಹೇಳಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ, ‘ಅಂಬೇಡ್ಕರ್ ಅವರ ಹೆಸರನ್ನು ಹೇಳಿಕೊಂಡು ಎಷ್ಟೋ ಜನ ತಮ್ಮ ಹಕ್ಕುಗಳನ್ನು ಪಡೆಯುತ್ತಿದ್ದಾರೆ. ಅವರ ಹೆಸರು ಹೇಳುವುದು ಘನತೆಯ ಸಂಕೇತವಾಗಿದೆ. ಕೋಟ್ಯಾಂತರ ದಲಿತರು ಮತ್ತು ವಂಚಿತ ವರ್ಗದವರಿಗೆ ಅಂಬೇಡ್ಕರ್ ಹೆಸರು ಆತ್ಮ ಗೌರವದ ಸಂಕೇತವಾಗಿದೆ’ ಎಂದು ಹೇಳಿದ್ದಾರೆ.
ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ವಿರುದ್ಧ ಇಂಡಿಯಾ ಮೈತ್ರಿಕೂಟದ ಹಲವು ಸಂಸದರು ಕಿಡಿಕಾರಿದ್ದಾರೆ. ಸಂಸತ್ ಆವರಣದಲ್ಲಿ ಅಂಬೇಡ್ಕರ್ ಫೋಟೊ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಏನಿದು ಆರೋಪ?
ಮಂಗಳವಾರ ರಾಜ್ಯಸಭೆಯಲ್ಲಿ ಮಾತನಾಡಿದ್ದ ಅಮಿತ್ ಶಾ ಅವರು, ‘ಅಂಬೇಡ್ಕರ್, ಅಂಬೇಡ್ಕರ್... ಎಂದು ಹೇಳುವುದು ಇದೀಗ ಫ್ಯಾಷನ್ ಆಗಿಬಿಟ್ಟಿದೆ. ಅಂಬೇಡ್ಕರ್ ಬದಲು ದೇವರ ನಾಮಸ್ಮರಣೆ ಮಾಡಿದ್ದರೆ, ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು’ ಎಂದು ಹೇಳಿದ್ದರು.
ಈ ವಿಡಿಯೊವನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.