ADVERTISEMENT

ಬುಡಕಟ್ಟು ಮಹಿಳೆಯರ ಮೇಲೆ ಅತ್ಯಾಚಾರ: 21 ಮಂದಿ ಪೊಲೀಸರ ಖುಲಾಸೆ

ಪಿಟಿಐ
Published 8 ಏಪ್ರಿಲ್ 2023, 16:28 IST
Last Updated 8 ಏಪ್ರಿಲ್ 2023, 16:28 IST
.
.   

ವಿಶಾಖಪಟ್ಟಣ: ಕೋಂಧ್‌ ಬುಡಕಟ್ಟಿಗೆ ಸೇರಿದ 11 ಮಂದಿ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದ ಆರೋಪಿಗಳಾದ 21 ಮಂದಿ ಪೊಲೀಸರನ್ನು ಇಲ್ಲಿನ ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿದೆ.

ನಿಷ್ಪಕ್ಷಪಾತ ಮತ್ತು ನ್ಯಾಯಯುತವಾದ ತನಿಖೆ ನಡೆಸಲು ಇಬ್ಬರು ಅಧಿಕಾರಿಗಳು ವಿಫಲರಾದ ಕಾರಣ ಆರೋಪಿಗಳನ್ನು ಪ್ರಾಥಮಿಕವಾಗಿ ಖುಲಾಸೆಗೊಳಿಸುವುದಾಗಿ ನ್ಯಾಯಾಲಯ ಹೇಳಿದೆ.

ಗ್ರೇಹೌಂಡ್ಸ್ ವಿಶೇಷ ತಂಡದ ಪೊಲೀಸರು 2007 ಆಗಸ್ಟ್‌ನಲ್ಲಿ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಗ್ರಾಮವೊಂದರ ಬುಡಕಟ್ಟು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು ಎಂದು ಆರೋಪಿಸಲಾಗಿತ್ತು.

ADVERTISEMENT

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯ ವಿಶೇಷ ನ್ಯಾಯಾಲಯವು ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಅಲ್ಲದೆ ಅತ್ಯಾಚಾರ ಸಂತ್ರಸ್ತೆಯರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಪರಿಹಾರ ನೀಡಬೇಕು ಎಂದೂ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದ ಯಾವುದೇ ಆರೋಪಿಗಳನ್ನು ಬಂಧಿಸಲಾಗಿಲ್ಲ ಮತ್ತು ಅವರಲ್ಲಿ ಕೆಲವರು ಯಶಸ್ವಿಯಾಗಿ ನಿವೃತ್ತರಾದರು, ಇನ್ನು ಕೆಲವರು ನಿಧನರಾಗಿದ್ದಾರೆ ಎಂದು ಮಾನವ ಹಕ್ಕುಗಳ ವೇದಿಕೆಯ (ಎಚ್‌ಆರ್‌ಎಫ್) ಆಂಧ್ರ ಪ್ರದೇಶ ರಾಜ್ಯ ಸಮಿತಿಯ ಉಪಾಧ್ಯಕ್ಷ ಎಂ.ಶರತ್‌ ಹೇಳಿದ್ದಾರೆ.

‘ವಕಪಲ್ಲಿ ಗ್ರಾಮಕ್ಕೆ ಶೋಧ ಕಾರ್ಯಾಚರಣೆಗೆ ತೆರಳಿದ್ದ 21 ಮಂದಿ ಪೊಲೀಸರು 11 ಮಂದಿ ಬುಡಕಟ್ಟು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ’ ಎಂದೂ ಅವರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.