ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಭಾರತದ ಪೌರತ್ವ ಪಡೆಯುವ 3 ವರ್ಷಗಳ ಮೊದಲೇ ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯ ಮೇಲಿನ ತೀರ್ಪನ್ನು ದೆಹಲಿ ನ್ಯಾಯಾಲಯ ಬುಧವಾರ ಕಾಯ್ದಿರಿಸಿದೆ.
ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವೈಭವ್ ಚೌರಾಸಿಯಾ ಅವರು, ತೀರ್ಪನ್ನು ಕಾಯ್ದಿರಿಸಲಾಗಿದೆ ಎಂದು ಹೇಳಿದರು.
ದೂರುದಾರ ವಿಕಾಸ್ ತ್ರಿಪಾಠಿ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಪವನ್ ನಾರಂಗ್, 1980ರ ಜನವರಿಯಲ್ಲಿ ಸೋನಿಯಾ ಗಾಂಧಿ ಅವರ ಹೆಸರನ್ನು ನವದೆಹಲಿ ಕ್ಷೇತ್ರದ ಮತದಾರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿತ್ತು. ಆದರೆ ಆ ಸಮಯದಲ್ಲಿ ಅವರು ಭಾರತ ಪ್ರಜೆಯೇ ಆಗಿರಲಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಸೋನಿಯಾ ಅವರು ಭಾರತದ ಪ್ರಜೆಯಾಗಿದ್ದರೆ 1982ರಲ್ಲಿ ಅವರ ಹೆಸರನ್ನು ತೆಗೆದುಹಾಕಿದ್ದು ಏಕೆ ಮತ್ತು 1983ರಲ್ಲಿ ಮತ್ತೆ ಸೇರ್ಪಡೆ ಮಾಡಿದ್ದು ಏಕೆ ಎಂದು ಪ್ರಶ್ನಿಸಿದರು.
1983ರಲ್ಲಿ ಸೋನಿಯಾ ಅವರು ಭಾರತದ ಪೌರತ್ವ ಪಡೆದಿದ್ದಾರೆ. ಆದರೆ ಅದಕ್ಕೂ ಮೊದಲೇ(1980) ಅವರ ಹೆಸರು ಮತದಾರರ ಪಟ್ಟಿಯಲ್ಲಿತ್ತು ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.