ನವದೆಹಲಿ: ಕೇರಳ, ದೆಹಲಿ, ಪುದುಚೇರಿ, ಮೇಘಾಲಯ, ಗೋವಾ ಮತ್ತು ಮಿಜೋರಾಂಗಳಲ್ಲಿ ಕೋವಿಡ್–19 ಹರಡುವಿಕೆ ತಡೆಯುವ ನಿಟ್ಟಿನಲ್ಲಿ ವಿಧಿಸಲಾಗಿರುವ ಲಾಕ್‌ಡೌನ್ ಅನ್ನು ವಿಸ್ತರಿಸಲಾಗಿದೆ. ಹಿಮಾಚಲ ಪ್ರದೇಶದಲ್ಲಿ ನಿರ್ಬಂಧಗಳನ್ನು ತುಸು ಸಡಿಲಿಸಲಾಗಿದೆ.
ಕೇರಳದಲ್ಲಿ ಜೂನ್ 9 ರವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದೆ. ಮಲಪ್ಪುರಂ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಉಳಿದಂತೆ ಇತರೆ ಜಿಲ್ಲೆಗಳಲ್ಲಿ ಸಾಮಾನ್ಯ ಲಾಕ್‌ಡೌನ್ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ವಿಜಯನ್ ತಿಳಿಸಿದ್ದಾರೆ.
ಈ ಮಧ್ಯೆ, ದೆಹಲಿಯಲ್ಲಿ ಸದ್ಯ ಕೊರೊನಾ ನಿಯಂತ್ರಣದಲ್ಲಿದ್ದು, ಹಂತಹಂತವಾಗಿ ಲಾಕ್‌ಡೌನ್ ಸಡಿಲಿಸುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ರಾಷ್ಟ್ರರಾಜಧಾನಿಯಲ್ಲಿ ಸದ್ಯ ಜೂನ್ 7ರ ವರೆಗೆ ಲಾಕ್‌ಡೌನ್ ವಿಸ್ತರಣೆಯಾಗಿದೆ.
ಪುದುಚೇರಿಯಲ್ಲಿ ಜೂನ್ 7ರ ವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದೆ.
ಮಿಜೋರಾಂ, ಮೇಘಾಲಯಗಳಲ್ಲಿ ಜೂನ್ 6ರ ವರೆಗೆ ಮತ್ತು ಗೋವಾದಲ್ಲಿ ಜೂನ್ 7ರ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ.
‘ಜೂನ್ 7ರ ಬೆಳಿಗ್ಗೆ 7 ಗಂಟೆಯವರೆಗೆ ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಆದಕ್ಕೆ ಸಂಬಂಧಿಸಿದ ಆದೇಶಗಳನ್ನು ಆಯಾ ಜಿಲ್ಲಾಧಿಕಾರಿಗಳು ಹೊರಡಿಸಬೇಕು’ ಎಂದು ಗೋವಾ ಮುಖ್ಯಮಂತ್ರಿ ಕಚೇರಿ ಶನಿವಾರ ಟ್ವೀಟ್ ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.