ADVERTISEMENT

ಸಂಜೆ 6ರಿಂದ ಬೆಳಗ್ಗೆ 6ರ ವರೆಗೆ ಪುಣೆಯಲ್ಲಿ ಕರ್ಫ್ಯೂ: ನಾಳೆಯಿಂದಲೇ ಜಾರಿ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2021, 9:08 IST
Last Updated 2 ಏಪ್ರಿಲ್ 2021, 9:08 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಪುಣೆ: ಕೋವಿಡ್ ಸೋಂಕು ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿರುವ ಕಾರಣ ಮಹಾರಾಷ್ಟ್ರದ ಪುಣೆಯಲ್ಲಿ ಶನಿವಾರದಿಂದ ರಾತ್ರಿ ಕರ್ಫ್ಯೂ ಘೋಷಿಸಲಾಗಿದೆ.

ಸಂಜೆ 6ರಿಂದ ಬೆಳಿಗ್ಗೆ 6ರ ವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ. ಮುಂದಿನ ಶುಕ್ರವಾರ ಪರಿಸ್ಥಿತಿ ನೋಡಿಕೊಂಡು ನಂತರದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪುಣೆ ವಿಭಾಗೀಯ ಆಯುಕ್ತ ಸೌರಭ್ ರಾವ್ ತಿಳಿಸಿದ್ದಾರೆ ಎಂದು ‘ಎಎನ್‌ಐ’ ಟ್ವೀಟ್ ಮಾಡಿದೆ.

ಬಾರ್‌, ಹೋಟೆಲ್‌, ರೆಸ್ಟೋರೆಂಟ್‌ಗಳು 7 ದಿನಗಳ ಕಾಲ ಮುಚ್ಚಿರಲಿವೆ. ಹೋಮ್ ಡೆಲಿವರಿಗೆ ಮಾತ್ರ ಅವಕಾಶ ನೀಡಲಾಗಿದೆ. ಸಾರ್ವಜನಿಕ ಸಭೆ, ಸಮಾರಂಭಗಳಿಗೆ ನಿರ್ಬಂಧ ಹೇರಲಾಗಿದೆ. ಮದುವೆ, ಅಂತ್ಯಸಂಸ್ಕಾರಗಳಿಗೆ ಕ್ರಮವಾಗಿ ಗರಿಷ್ಠ 50 ಹಾಗೂ 20 ಜನ ಸೇರಲು ಅವಕಾಶ ನೀಡಲಾಗಿದೆ. ಶನಿವಾರದಿಂದ (ಏಪ್ರಿಲ್ 3) ಆದೇಶ ಜಾರಿಗೆ ಬರಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಮಹಾರಾಷ್ಟ್ರದಾದ್ಯಂತ ಕಳೆದ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿವೆ. ರಾಜ್ಯದಲ್ಲಿ ಸದ್ಯ 3,67,897 ಸಕ್ರಿಯ ಪ್ರಕರಣಗಳಿವೆ. ಒಟ್ಟಾರೆ ಈವರೆಗೆ 28,56,163 ಜನರಿಗೆ ಸೋಂಕು ತಗುಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.