ADVERTISEMENT

ಕೋವಿಡ್‌-19: ಜಮ್ಮು ಮತ್ತು ಕಾಶ್ಮೀರವನ್ನು ಬೆಚ್ಚಿಬೀಳಿಸಿದ ವರದಿ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2020, 15:16 IST
Last Updated 5 ಏಪ್ರಿಲ್ 2020, 15:16 IST
ಕೊರೊನಾ ವೈರಸ್
ಕೊರೊನಾ ವೈರಸ್   

ಶ್ರೀನಗರ: ಕೊರೊನಾ ವೈರಸ್ ಸೋಂಕಿಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದಿಂದ ಆತಂಕಕಾರಿ ಸುದ್ದಿಯೊಂದು ಹೊರಬಿದ್ದಿದೆ.

ಕಣಿವೆ ಪ್ರದೇಶದಲ್ಲಿ ಪರೀಕ್ಷೆಗೆ ಒಳಪಡಿಸಲಾದ ಶೇ 7ರಷ್ಟು ಮಂದಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು, ಇದು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದೆ.

ಏಪ್ರಿಲ್‌ 4ರವರೆಗೆ ಕಾಶ್ಮೀರ ಕಣಿವೆಯಲ್ಲಿ 1,342 ಪರೀಕ್ಷೆಗಳನ್ನು ಮಾಡಲಾಗಿದ್ದು, ಅವುಗಳಲ್ಲಿ 92 ಮಂದಿಗೆ ಸೋಂಕು ದೃಢಪಟ್ಟಿದೆ. ಅಂದರೆ ಒಟ್ಟು ಪರೀಕ್ಷೆಗೆ ಒಳಗಾದವರಲ್ಲಿ ಸೋಂಕು ದೃಢಪಟ್ಟವರ ಪ್ರಮಾಣ ಶೇ 6.8ರಷ್ಟಿದೆ. ಈ ಪ್ರಮಾಣವು ಇತರೆ ರಾಜ್ಯಗಳಿಂತ ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವರದಿ ಹೇಳಿದೆ.

ADVERTISEMENT

ಸದ್ಯ ಹತ್ತು ಲಕ್ಷ ಜನರಲ್ಲಿ ನೂರು ಜನರನ್ನು ಪರೀಕ್ಷೆ ಮಾಡಲಾಗುತ್ತಿದೆ. ಬಹುತೇಕ ರಾಜ್ಯಗಳು ಇದಕ್ಕಿಂತ ಕಡಿಮೆ ಪರೀಕ್ಷೆ ಮಾಡಿವೆ. ಹೆಚ್ಚು ಪರೀಕ್ಷೆ ಮಾಡುತ್ತಿರುವ ರಾಜ್ಯಗಳಲ್ಲಿ ಹೆಚ್ಚಿನ ಸೋಂಕಿತರು ಪತ್ತೆ ಆಗುತ್ತಿದ್ದಾರೆ. ಕೇರಳ ಸರ್ಕಾರವು ಹತ್ತು ಲಕ್ಷ ಜನರಲ್ಲಿ 260 ಜನರನ್ನು ಪರೀಕ್ಷಿಸುತ್ತಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷಾ ಕೇಂದ್ರಗಳನ್ನು ಹೊಂದಿರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಹೆಚ್ಚಿನ ಪರೀಕ್ಷೆ ನಡೆಸುತ್ತಿವೆ. ಹಾಗಾಗಿ ಹೆಚ್ಚಿನ ಪ್ರಕರಣಗಳು ಕಂಡು ಬಂದಿವೆ. ಗೋವಾ, ಸಿಕ್ಕಿಂ ಹಾಗೂ ಕೇಂದ್ರಾಡಳಿತ ಪ್ರದೇಶಗಳಾದ ದೆಹಲಿ, ಚಂಡೀಗಡ, ಲಡಾಕ್‌ ಹೆಚ್ಚಿನ ಪರೀಕ್ಷೆ ನಡೆಸಿವೆ ಎಂದು ವರದಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.