ನವದೆಹಲಿ: ‘18ರಿಂದ 45 ವರ್ಷದೊಳಗಿನ 59 ಕೋಟಿ ಜನರಿಗೆ ಲಸಿಕೆ ನೀಡಲು 122 ಕೋಟಿ ಡೋಸ್‌ಗಳ ಅವಶ್ಯಕತೆಯಿದೆ’ ಎಂದು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‌ಗೆ ತಿಳಿಸಿದೆ.
‘ಲಸಿಕೆಯೇ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ನಮ್ಮಲ್ಲಿರುವ ಸಂಪನ್ಮೂಲಗಳನ್ನು ಗಮನದಲ್ಲಿಟ್ಟುಕೊಂಡು ಅತಿ ಕಡಿಮೆ ಸಮಯದಲ್ಲಿ ಶೇಕಡ 100ರಷ್ಟು ಲಸಿಕೆ ನೀಡಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ’ ಎಂದು ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಹೇಳಿದೆ.
‘ಪ್ರಸ್ತುತ ಭಾರತದಲ್ಲಿ ಕೊವ್ಯಾಕ್ಸಿನ್ ಮತ್ತು ಕೋವಿಶಿಲ್ಡ್ ಲಸಿಕೆಗಳು ಸೀಮಿತ ಪ್ರಮಾಣದಲ್ಲಿ ಮಾತ್ರ ಲಭ್ಯವಿದೆ. ಹಾಗಾಗಿ ಆರೋಗ್ಯ ಕಾರ್ಯಕರ್ತರಿಗೆ ಮೊದಲ ಆದ್ಯತೆಯನ್ನು ನೀಡಲಾಗಿದೆ’ ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ.
‘ಕೇಂದ್ರ ಸರ್ಕಾರವು ವಿದೇಶಿ ಲಸಿಕೆಗಳ ತುರ್ತು ಬಳಕೆಗೆ ಅನುಮತಿ ನೀಡುವ ಕೆಲಸವನ್ನು ತ್ವರಿತವಾಗಿ ಮಾಡುತ್ತಿದೆ. ಸ್ಥಳೀಯವಾಗಿ ಉತ್ಪಾದಿಸಲಾಗುತ್ತಿರುವ ರಷ್ಯಾ ನಿರ್ಮಿತ ಸ್ಪುಟ್ನಿಕ್ ವಿ ಲಸಿಕೆಯು ಜುಲೈ ತಿಂಗಳಲ್ಲಿ ಲಭ್ಯವಾಗಲಿದೆ. ಜುಲೈ ವೇಳೆಗೆ 80 ಲಕ್ಷ ಮತ್ತು ಆಗಸ್ಟ್ ವೇಳೆಗೆ 1.6 ಕೋಟಿ ಲಸಿಕೆಯ ಡೋಸ್‌ಗಳು ಲಭ್ಯವಾಗಬಹುದು ಎಂದು ಅಂದಾಜಿಸಲಾಗಿದೆ. ಭಾರತದಲ್ಲಿ ಲಸಿಕೆಯನ್ನು ಉತ್ಪಾದಿಸುವ ಬಗ್ಗೆ ಫೈಜರ್, ಮೊಡೆರ್ನಾ, ಜಾನ್ಸನ್ ಆ್ಯಂಡ್ ಜಾನ್ಸನ್ ಸಂಸ್ಥೆಗಳೊಂದಿಗೆ ಮಾತುಕತೆ ನಡೆಯುತ್ತಿದೆ’ ಎಂದು ಕೇಂದ್ರ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.