ADVERTISEMENT

ಬಿಹಾರ: ಚುನಾವಣಾ ರ‍್ಯಾಲಿಗಳಲ್ಲಿ ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆ

ಪಿಟಿಐ
Published 26 ಅಕ್ಟೋಬರ್ 2020, 10:47 IST
Last Updated 26 ಅಕ್ಟೋಬರ್ 2020, 10:47 IST
ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಚುನಾವಣಾ ರ‍್ಯಾಲಿಗಳಲ್ಲಿ ಭಾಗವಹಿಸಿದ್ದ ಜನರು  
ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಚುನಾವಣಾ ರ‍್ಯಾಲಿಗಳಲ್ಲಿ ಭಾಗವಹಿಸಿದ್ದ ಜನರು     

ಪಾಟ್ನಾ/ಬಾಗಲ್ಪುರ/ಗಯಾ: ಬಿಹಾರ ವಿಧಾನಸಭಾ ಚುನಾವಣಾ ಪ್ರಚಾರ ದಿನೇ ದಿನೇ ಕಾವೇರುತ್ತಿದೆ. ಆದರೆ, ಬಹುತೇಕ ರ‍್ಯಾಲಿಗಳಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗುತ್ತಿದೆ.

ಚುನಾವಣಾ ಪ್ರಚಾರದ ವೇಳೆ ಕಡ್ಡಾಯವಾಗಿ ಕೋವಿಡ್‌ ಮಾರ್ಗಸೂಚಿಯನ್ನು ಅನುಸರಿಸಬೇಕು ಎಂದು ಚುನಾವಣಾ ಆಯೋಗವು ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಆದರೆ, ರ‍್ಯಾಲಿಗಳಲ್ಲಿ ಭಾಗವಹಿಸುವ ಜನರು ಮಾಸ್ಕ್‌ ಧರಿಸದೆ, ಸುರಕ್ಷಿತ ಅಂತರಗಳನ್ನು ಪಾಲಿಸದಿರುವುದು ಕಂಡುಬಂದಿದೆ ಎಂದು ಆಯೋಗ ಆಕ್ರೋಶ ವ್ಯಕ್ತಪಡಿಸಿದೆ.

ದೆಹ್ರಿ, ಗಯಾ, ಬಾಗಲ್ಪುರ್‌ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ಚುನಾವಣಾ ರ‍್ಯಾಲಿಗಳಲ್ಲಿ ಮಾತ್ರ ಕಟ್ಟುನಿಟ್ಟಾಗಿ ಕೋವಿಡ್‌–19 ಮಾರ್ಗಸೂಚಿಯನ್ನು ಪಾಲಿಸಲಾಗಿತ್ತು. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪಾಲ್ಗೊಂಡಿದ್ದ ಹಿಸ್ವಾ, ಕಹಲ್ಗಾನ್‌ ಚುನಾವಣಾ ಸಮಾವೇಶದಲ್ಲಿಯೂ ಮಾರ್ಗಸೂಚಿಯನ್ನು ಅನುಸರಿಸಲಾಗಿತ್ತು. ಇನ್ನುಳಿದ ರ‍್ಯಾಲಿಗಳಲ್ಲಿ ಮಾರ್ಗಸೂಚಿಗಳನ್ನು ಪಾಲಿಸಿಲ್ಲ ಎಂದು ಆಯೋಗ ಹೇಳಿದೆ.

ADVERTISEMENT

ಚುನಾವಣಾ ಪ್ರಚಾರದ ವೇಳೆ ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಅಭ್ಯರ್ಥಿಗಳ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ ಅಡಿಯಲ್ಲಿ ಕಾನೂನು ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗವು ಬಿಹಾರದ ಮುಖ್ಯ ಚುನಾವಣಾ ಅಧಿಕಾರಿ ಮತ್ತು ಜಿಲ್ಲಾಡಳಿತಗಳಿಗೆ ಅಕ್ಟೋಬರ್‌ 21ಕ್ಕೆ ನಿರ್ದೇಶನ ನೀಡಿದೆ.

ಚುನಾವಣಾ ಆಯೋಗದ ಸೂಚನೆಗಳನ್ನು ಪಾಲಿಸದ ಅಭ್ಯರ್ಥಿಗಳು ಮತ್ತು ಸಂಘಟಕರು ವಿಪತ್ತು ನಿರ್ವಹಣಾ ಕಾಯ್ದೆಯಡಿ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

‘ರ‍್ಯಾಲಿಯಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಉದ್ದೇಶಪೂರ್ವಕವಾಗಿ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದು ಹೆಚ್ಚುವರಿ ಚುನಾವಣಾ ಮುಖ್ಯ ಅಧಿಕಾರಿ ಸಂಜಯ್‌ ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.