ADVERTISEMENT

ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದನೆ ಮೇಲೆ ನಿರ್ಣಾಯಕ ನಿಯಂತ್ರಣ: ಅಮಿತ್‌ ಶಾ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2022, 10:41 IST
Last Updated 19 ಮಾರ್ಚ್ 2022, 10:41 IST
ಅಮಿತ್ ಶಾ: ಪಿಟಿಐ ಚಿತ್ರ
ಅಮಿತ್ ಶಾ: ಪಿಟಿಐ ಚಿತ್ರ   

ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಕೇಂದ್ರ ಸರ್ಕಾರವು ಮೊದಲ ಬಾರಿಗೆ ಇಲ್ಲಿನ ಭಯೋತ್ಪಾದನೆಯ ಮೇಲೆ ನಿರ್ಣಾಯಕ ನಿಯಂತ್ರಣ ಹೊಂದಿರುವುದು ನಮ್ಮ ಬಹುದೊಡ್ಡ ಸಾಧನೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು.

ಇಲ್ಲಿನ ಮೌಲನಾ ಆಜಾದ್‌ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) 83ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

’ಜಮ್ಮು ಮತ್ತು ಕಾಶ್ಮೀರದ ಪ್ರತಿ ಹಳ್ಳಿಯಲ್ಲೂ ನಾವು ಒಬ್ಬ ಸರಪಂಚ, ಪಂಚರನ್ನು ಹೊಂದಿರುವುದರಿಂದ ಇಲ್ಲಿ ಪ್ರಜಾಪ್ರಭುತ್ವವು ಪ್ರವರ್ಧಮಾನಕ್ಕೆ ಬರುತ್ತಿದೆ. ಕಣಿವೆ ಪ್ರದೇಶದಲ್ಲಿ ಪ್ರಜಾಪ್ರಭುತ್ವವನ್ನು ತಳಮಟ್ಟಕ್ಕೆ ಕೊಂಡೊಯ್ಯಲಾಗಿದೆ. ಜಮ್ಮು ಮತ್ತು ಕಾಶ್ಮೀರ ಆಡಳಿತವು ₹ 33,000 ಕೋಟಿ ಹೂಡಿಕೆಯನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದ್ದು, ಹೆದ್ದಾರಿಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಕಣಿವೆ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಆಧುನಿಕ ವಿಧಾನಗಳನ್ನು ಬಳಸಲಾಗುತ್ತಿದೆ’ ಎಂದು ಹೇಳಿದರು.

ADVERTISEMENT

‘ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ವಿರುದ್ಧ ಹೋರಾಟ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತೊಡಗಿಸಿಕೊಂಡಿರುವ ಸಿಆರ್‌ಪಿಎಫ್‌, ದೇಶದ ಅತ್ಯುತ್ತಮ ಪೊಲೀಸ್‌ ಪಡೆ ಎನಿಸಿಕೊಂಡಿದೆ. ಸಿಆರ್‌ಪಿಎಫ್ ಯೋಧರ ಮಹಾನ್ ತ್ಯಾಗವನ್ನು ಎಂದಿಗೂ ಮರೆಯಲಾಗದು. ಹುತಾತ್ಮ ಯೋಧರ ಕುಟುಂಬಗಳನ್ನು ಎಂದಿಗೂ ಸರ್ಕಾರ ಒಂಟಿಯಾಗಿ ಬಿಡುವುದಿಲ್ಲ’ ಎಂದು ಸಚಿವರು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.