
ಮೊಂಥಾ ಚಂಡಮಾರುತದ ಕಾರಣಕ್ಕೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಸಮುದ್ರ ಪ್ರಕ್ಷುಬ್ದಗೊಂಡಿದೆ
–ಪಿಟಿಐ ಚಿತ್ರ
ಅಮರಾವತಿ: ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಿದ ಮೊಂಥಾ ಚಂಡಮಾರುತದಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬುಧವಾರ ತಿಳಿಸಿದ್ದಾರೆ.
ಚಂಡಮಾರುತದಿಂದ ಹಾನಿಗೊಳಗಾದ ಜನರಿಗೆ ಪರಿಹಾರ ಒದಗಿಸಲು ಹಾಗೂ ಇನ್ನೂ ಎರಡು ದಿನಗಳ ಕಾಲ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾಯ್ಡು ಸೂಚನೆ ನೀಡಿದ್ದಾರೆ.
ಮುನ್ನೆಚ್ಚರಿಕೆ ಕ್ರಮಗಳಿಂದಾಗಿ ಚಂಡಮಾರುತದಿಂದ ಆಗಬಹುದಾದ ಹಾನಿಯನ್ನು ಕಡಿಮೆಮಾಡಲಾಗಿದೆ. ಮೊಂಥಾ ಚಂಡಮಾರುತ ತೀವ್ರತೆ ಕಡಿಮೆ ಆಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಸಾಧ್ಯವಾದಷ್ಟು ಬೇಗ ಮತ್ತೆ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರುವಂತೆ ಅಧಿಕಾರಿಗಳಿಗೆ ನಾಯ್ಡು ಹೇಳಿದ್ದಾರೆ.
ಚಂಡಮಾರುತದಿಂದ ಉಂಟಾದ ಹಾನಿಯನ್ನು ಅಂದಾಜು ಮಾಡುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಒದಗಿಸಬೇಕು. ಅದೇ ರೀತಿ, ಸಂತ್ರಸ್ತರಿಗೆ ಆಹಾರ ಮತ್ತು ಇತರ ಅಗತ್ಯ ವಸ್ತುಗಳನ್ನು ವಿತರಿಸಲು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ನೆರೆ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿಚಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ನಾಯ್ಡು ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.