ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿಯಾದ ಉದ್ಯಮಿ ರಾಜ್ ಕುಂದ್ರಾ ಮತ್ತು ಇತರರಿಗೆ ಸೇರಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಶುಕ್ರವಾರ ಶೋಧ ನಡೆಸಿದರು.
ಅಶ್ಲೀಲ ಚಿತ್ರಗಳ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಭಾಗವಾಗಿ ಇ.ಡಿ ತನಿಖೆ ನಡೆಸುತ್ತಿದೆ.
ರಾಜ್ ಕುಂದ್ರಾ ಮತ್ತು ಇತರರಿಗೆ ಸಂಬಂಧಿಸಿದ ಆಸ್ತಿಗಳಿರುವ ಮುಂಬೈನ 15 ಸ್ಥಳಗಳು ಮತ್ತು ಉತ್ತರಪ್ರದೇಶದ ಕೆಲ ನಗರಗಳಲ್ಲಿ ಇ.ಡಿ ಅಧಿಕಾರಿಗಳು ಶೋಧ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಅಶ್ಲೀಲ ಚಿತ್ರಗಳ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಕುಂದ್ರಾ ಮತ್ತು ಇತರರ ವಿರುದ್ಧ ಮುಂಬೈ ಪೊಲೀಸರು ದಾಖಲಿಸಿದ್ದ ಎರಡು ಪ್ರಕರಣಗಳು ಮತ್ತು ದೋಷಾರೋಪ ಪಟ್ಟಿಯ ಆಧಾರದಲ್ಲಿ 2022ರ ಮೇ ತಿಂಗಳಲ್ಲಿ ಇ.ಡಿ ಪ್ರಕರಣ ದಾಖಲಿಸಿಕೊಂಡಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಕುಂದ್ರಾ ಮತ್ತು ಇತರರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿ ಕುಂದ್ರಾ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣ ಇದಾಗಿದ್ದು, ಕ್ರಿಪ್ಟೊ ಕರೆನ್ಸಿ ಪ್ರಕರಣಕ್ಕೆ ಸಂಬಂಧಿಸಿ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿಗೆ ಸೇರಿದ ₹98 ಕೋಟಿ ಮೌಲ್ಯದ ಆಸ್ತಿಯನ್ನು ಈ ವರ್ಷದ ಆರಂಭದಲ್ಲಿ ಇ.ಡಿ ಮುಟ್ಟುಗೋಲು ಹಾಕಿಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.