ADVERTISEMENT

ಪೂರ್ವ ಲಡಾಖ್‌ನ ಭದ್ರತಾ ಸ್ಥಿತಿಗತಿ ಪರಾಮರ್ಶಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಪಿಟಿಐ
Published 23 ಆಗಸ್ಟ್ 2020, 2:38 IST
Last Updated 23 ಆಗಸ್ಟ್ 2020, 2:38 IST
ರಕ್ಷಣಾ ಸಚಿವ ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್ ಸಿಂಗ್   

ನವದೆಹಲಿ: ಪೂರ್ವ ಲಡಾಖ್‌ನ ಗಡಿ ಪ್ರದೇಶಗಳ ಭದ್ರತಾ ಸ್ಥಿತಿಗತಿ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಪರಾಮರ್ಶೆ ನಡೆಸಿದ್ದಾರೆ. ಆ ಪ್ರದೇಶದ ಗಡಿಗಳಿಂದ ಸೇನಾ ಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳುವ ಬಗ್ಗೆ ಭಾರತ–ಚೀನಾ ನಡುವೆ ಮಾತುಕತೆ ನಡೆಯುತ್ತಿರುವ ಮಧ್ಯೆಯೇ ಸಚಿವರು ಪರಾಮರ್ಶೆ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪರಾಮರ್ಶೆ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್, ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಎಂ.ಎಂ.ನರವಣೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್, ವಾಯುಪಡೆ ಮುಖ್ಯಸ್ಥ ಆರ್.ಕೆ.ಎಸ್. ಭದೌರಿಯಾ ಭಾಗವಹಿಸಿದ್ದಾರೆ.

ಪೂರ್ವ ಲಡಾಖ್‌ನಲ್ಲಿ ಚೀನಾ ಜತೆಗಿನ ಗಡಿ ಸಂಘರ್ಷಕ್ಕೆ ಸಂಬಂಧಿಸಿದ ಎಲ್ಲ ಮುಖ್ಯ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿವೆ. ಗಡಿಯಲ್ಲಿ ಪರಿಸ್ಥಿತಿ ನಿಭಾಯಿಸಲು ಮುಂದೆ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬುದೂ ಚರ್ಚೆಯಾಗಿದೆ ಎಂದು ಮೂಲಗಳು ಹೇಳಿವೆ.

ಗಡಿ ಸಂಘರ್ಷಕ್ಕೆ ಸಂಬಂಧಿಸಿ ಕೈಗೊಳ್ಳಲಾಗಿರುವ ನಿರ್ಣಯವನ್ನು ಚೀನಾ ಸೇನೆ ಗಂಭೀರವಾಗಿ ಪರಿಗಣಿಸಿಲ್ಲ ಎಂಬುದು ಭಾರತೀಯ ಸೇನೆಯ ಅರಿವಿಗೆ ಬಂದ ಬೆನ್ನಲ್ಲೇ ಸಭೆ ನಡೆದಿದೆ.

ನೈಜ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಭಾರತ ಹೇಳಿತ್ತು. ಗಡಿಯಲ್ಲಿ ಯಥಾಸ್ಥಿತಿಯ ಬದಲಾವಣೆಗೆ ಚೀನಾ ಸೇನೆ ಮುಂದಾಗುವುದನ್ನು ಒಪ್ಪಲಾಗದು ಎಂದು ಭಾರತೀಯ ಸೇನೆ ಸ್ಪಷ್ಟವಾಗಿ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.