ನವದೆಹಲಿ: ನ್ಯಾಯಾಲಯಗಳು ಪ್ರಕರಣಗಳ ವಿಚಾರಣೆಯನ್ನುಮುಂದೂಡುತ್ತಿರುವುದರಿಂದ ಅನಗತ್ಯವಾಗಿ ತನಗೆ ಹೊರೆಯಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಆರೋಪಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ಎಂ.ಎಂ. ಸುಂದರೇಶ್ ಅವರನ್ನೊಳಗೊಂಡ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಆರೋಪಿಯು ಅಲಹಾಬಾದ್ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಕಳೆದ ಏಳು ತಿಂಗಳಿಂದ ಬಾಕಿ ಉಳಿದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪೀಠವು, ‘ಹೈಕೋರ್ಟ್ ಈ ಬಗ್ಗೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ನಿರ್ಧಾರ ಕೈಗೊಳ್ಳದೆ ಕೇವಲ ಮುಂದೂಡುವುದರಿಂದ ಈ ನ್ಯಾಯಾಲಯದ ಮೇಲೆ ಹೊರೆ ಹೆಚ್ಚಾಗುತ್ತಿದೆ’ ಎಂದು ಹೇಳಿದೆ.
ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಪೀಠವು, ‘ತನಿಖೆಯ ಸಂದರ್ಭದಲ್ಲಿ ಅರ್ಜಿದಾರರನ್ನು ಬಂಧಿಸಿಲ್ಲ. ತನಿಖೆಗೆ ಆರೋಪಿ ಸಹಕಾರ ನೀಡಿದ್ದಾರೆ. ಇಂತಹ ಸನ್ನಿವೇಶದಲ್ಲಿ ಆರೋಪಪಟ್ಟಿ ದಾಖಲಿಸಿದಾಗ ಅರ್ಜಿದಾರರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಅಗತ್ಯವಿಲ್ಲ’ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.