ADVERTISEMENT

12 ವರ್ಷದ ಬಾಲಕಿಯ ಮೇಲೆ ಹಲ್ಲೆ, ಅತ್ಯಾಚಾರ: ದೆಹಲಿಯಲ್ಲಿ ನಡೆಯಿತು ಅಮಾನವೀಯ ಘಟನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಆಗಸ್ಟ್ 2020, 12:27 IST
Last Updated 6 ಆಗಸ್ಟ್ 2020, 12:27 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಹಲ್ಲೆ ಮಾಡಿದ ಅಮಾನವೀಯ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ದೆಹಲಿಯ ಪಶ್ಚಿಮ್‌ ವಿಹಾರ್ ಪ್ರದೇಶದಲ್ಲಿ ನೆಲೆಸಿದ್ದ 12 ವರ್ಷದ ಬಾಲಕಿಯು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

'ಬಾಲಕಿಯ ದೇಹದ ಮೇಲೆ ಗಾಯಗಳಾಗಿದ್ದು, ಖಾಸಗಿ ಭಾಗಗಳಿಂದ ರಕ್ತಸ್ರಾವವಾಗುತ್ತಿತ್ತು. ಇಡೀ ದೇಹವು ರಕ್ತದಿಂದ ತೊಯ್ದಿತ್ತು. ಆಕೆಯನ್ನು ಮೊದಲು ಸಂಜಯ್ ಗಾಂಧಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆ ನಂತರ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿಯ ತಲೆ ಮತ್ತು ದೇಹದ ಹಿಂಬಾಗಗಳಿಗೆ ತೀಕ್ಷ್ಣ ಆಯುಧದಿಂದ ಹಲವು ಬಾರಿ ಹೊಡೆಯಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ADVERTISEMENT

ಸಂತ್ರಸ್ತೆಯನ್ನು ಕಾಣಲು ಏಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌, 'ಇದೊಂದು ಅನಾಗರಿಕ ಅಪರಾಧವಾಗಿದೆ. ನಾನು ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿದ್ದೇನೆ. ಅವರು ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿದೆ. ಆಕೆಯ ಕುಟುಂಬ ಸದಸ್ಯರಿಗೆ ₹10 ಲಕ್ಷ ಪರಿಹಾರ ನೀಡಲಾಗುತ್ತದೆ' ಎಂದು ತಿಳಿಸಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡುವ ಮೊದಲು ಟ್ವೀಟ್‌ ಮಾಡಿರುವ ಕೇಜ್ರಿವಾಲ್, 'ಈ ಘಟನೆ ನನ್ನನ್ನು ಆಳವಾಗಿ ಕಲುಕಿದೆ. ಮುಕ್ತವಾಗಿ ತಿರುಗಾಡುವ ಅತ್ಯಾಚಾರಿಗಳಂತಹ ಕ್ರೂರಿಗಳನ್ನು ಸಹಿಸಲಾಗದು' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.