
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಹೆಚ್ಚಳವಾಗಿರುವ ಕಾರಣ ಆನ್‌ಲೈನ್ ಮೂಲಕ (ವರ್ಚುವಲ್) ಅರ್ಜಿಗಳ ವಿಚಾರಣೆ ನಡೆಸುವ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಅವರು ಒಲವು ವ್ಯಕ್ತಪಡಿಸಿದ್ದಾರೆ.
‘ಹಿಂದಿನ ದಿನ ಒಂದು ತಾಸು ವಾಯುವಿಹಾರ ಮಾಡಿದ ನಂತರ ಅನಾರೋಗ್ಯ ಉಂಟಾಗಿದೆ’ ಎಂದು ಅವರು ಹೇಳಿದರು.
60 ವರ್ಷಕ್ಕಿಂತ ಮೇಲ್ಪಟ್ಟ ವಕೀಲರ ಪ್ರಕರಣಗಳನ್ನು ವರ್ಚುವಲ್ ಮೂಲಕ ವಿಚಾರಣೆ ನಡೆಸಲು ಅವಕಾಶ ನೀಡುವ ಆಲೋಚನೆಯೂ ಇದೆ. ವಕೀಲರ ಸಂಘದ ಜೊತೆ ಸಮಾಲೋಚನೆ ನಡೆಸಿದ ಬಳಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತಿತರ ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ವೇಳೆ ಸಿಜೆಐ ಈ ವಿಚಾರ ತಿಳಿಸಿದರು.
ಆಯೋಗದ ಪರ ಹಾಜರಿದ್ದ ವಕೀಲ ರಾಕೇಶ್ ದ್ವಿವೇದಿ ಅವರು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿದರು. ಹಿರಿಯ ವಕೀಲ ಕಪಿಲ್ ಸಿಬಲ್ ಅವರೂ, ‘ಈ ವಯಸ್ಸಿನಲ್ಲಿ ನಾವು ವಿಷಯುಕ್ತ ಗಾಳಿ ಸೇವಿಸುತ್ತಿದ್ದೇವೆ’ ಎಂದರು.
ಆಗ ಸಿಜೆಐ ಅವರು, ‘ವಕೀಲರು ಮತ್ತು ಕಕ್ಷಿದಾರರಿಗೆ ಎದುರಾಗುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ವಕೀಲರ ಸಂಘದ ಸದಸ್ಯರೊಂದಿಗೆ ಸಮಾಲೋಚಿಸಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳೋಣ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.