ಅರವಿಂದ ಕೇಜ್ರಿವಾಲ್
ನವದೆಹಲಿ: ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪತ್ರ ಬರೆದಿದ್ದಾರೆ. ರಾಷ್ಟ್ರ ರಾಜಧಾನಿಯನ್ನು ’ಅಪರಾಧಗಳ ರಾಜಧಾನಿ’ ಎಂದು ಕುಖ್ಯಾತಿ ಪಡೆಯುತ್ತಿರುವುದರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಜ್ರಿವಾಲ್, 'ದೆಹಲಿಯಲ್ಲಿ ನಿಮ್ಮ ಕಣ್ಗಾವಲಿನಲ್ಲಿ ಕಾನೂನು ಸುವ್ಯವಸ್ಥೆ ತೀರ ಹದಗೆಟ್ಟಿದ್ದು, ಇದು ಕೇಂದ್ರ ಸರ್ಕಾರದ ವೈಫಲ್ಯ' ಎಂದು ಕುಟುಕಿದ್ದಾರೆ.
ದೆಹಲಿಯನ್ನು ಅತ್ಯಾಚಾರಗಳ ರಾಜಧಾನಿ, ದರೋಡೆಕೋರರ ರಾಜಧಾನಿ, ಡ್ರಗ್ ಕ್ಯಾಪಿಟಲ್ ಎಂದೆಲ್ಲಾ ಕರೆಯಲಾಗುತ್ತಿದೆ. ಮಹಿಳೆಯರ ಮೇಲಿನ ಅಪರಾಧಗಳು ಹೆಚ್ಚುತ್ತಿವೆ, ಸುಲಿಗೆ ಗ್ಯಾಂಗ್‌ಗಳು ಮತ್ತು ಡ್ರಗ್ ಮಾಫಿಯಾ ಎಲ್ಲೆಡೆ ಸಕ್ರಿಯವಾಗಿವೆ. ಇದು ನಾಚಿಕೆಗೇಡಿನ ಸಂಗತಿ ಎಂದು ಕೇಂದ್ರದ ವಿರುದ್ಧ ಕೇಜ್ರಿವಾಲ್ ಕಿಡಿಕಾರಿದ್ದಾರೆ.
'ಕಳೆದ ಆರು ತಿಂಗಳಲ್ಲಿ 600ಕ್ಕೂ ಹೆಚ್ಚು ಶಾಲೆಗಳು, 100ಕ್ಕೂ ಹೆಚ್ಚು ಆಸ್ಪತ್ರೆಗಳು, ಮಾಲ್‌ಗಳು ಸೇರಿದಂತೆ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ. ಅಪರಾಧ ಪ್ರಕರಣಗಳು ಏರಿಕೆಯಾಗುತ್ತಿದ್ದರೂ ಏಕೆ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿಲ್ಲ' ಎಂದು ಪ್ರಶ್ನಿಸಿದ್ದಾರೆ.
ಬಾಂಬ್ ಬೆದರಿಕೆ ಪ್ರಕರಣಗಳು ದಿನೆ ದಿನೇ ಹೆಚ್ಚುತ್ತಲೇ ಇದೆ. ಇದರಿಂದ ಮಕ್ಕಳನ್ನು ಶಾಲೆಗೆ ಕಳುಹಿಸುವ ಪೋಷಕರು ಭಯದಲ್ಲಿಯೇ ಜೀವನ ನಡೆಸುತ್ತಿದ್ದಾರೆ. ಇಂತಹ ಹುಸಿ ಬಾಂಬ್ ಬೆದರಿಕೆಯೊಡ್ಡುವ ಆರೋಪಿಗಳ ವಿರುದ್ಧ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂತಹ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು. ರಾಜಕೀಯ ಹೊರತುಪಡಿಸಿ, ದೆಹಲಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮರಳಿ ಸ್ಥಾಪಿಸಬೇಕು. ಹೀಗಾಗಿ ಗೃಹ ಸಚಿವರ ಭೇಟಿಗೆ ಕಾಲಾವಕಾಶ ಕೋರಿ ಕೇಜ್ರಿವಾಲ್ ಪತ್ರ ಬರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.