
ಎಫ್‌ಐಆರ್
(ಸಾಂದರ್ಭಿಕ ಚಿತ್ರ)
ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮತ್ತು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್) ಎಚ್ಚರಿಕೆಯ ಬಳಿಕ ಹರಿಯಾಣದ ಅಲ್ ಫಲಾಹ್ ವಿಶ್ವವಿದ್ಯಾಲಯದ ವಿರುದ್ಧ ದೆಹಲಿ ಪೊಲೀಸರು ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ.
ವಿಶ್ವವಿದ್ಯಾಲಯವು ನ್ಯಾಕ್ ಮತ್ತು ಯುಜಿಸಿಯಿಂದ ಮಾನ್ಯತೆ ಪಡೆದಿರುವುದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ ಕಾರಣ ಅಪರಾಧ ವಿಭಾಗವು ಪ್ರಕರಣ ದಾಖಲಿಸಿಕೊಂಡಿದೆ.
ಯುಜಿಸಿ ಮತ್ತು ನ್ಯಾಕ್ ವಿಶ್ವವಿದ್ಯಾಲಯದ ಪರಿಶೀಲನೆ ವೇಳೆ ಈ ಅಕ್ರಮಗಳು ಬಯಲಾಗಿವೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಸ್ಫೋಟಕ್ಕೆ ಸಂಬಂಧಿಸಿದಂತೆ ಪಿತೂರಿ ಮಾಡಿರುವ ಆರೋಪದಡಿ ವಿಶ್ವವಿದ್ಯಾಲಯದ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಈ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಲಾಗಿದೆ.
ನವೆಂಬರ್ 10ರಂದು (ಸೋಮವಾರ) ಕೆಂಪುಕೋಟೆಯ ಬಳಿ ಬಿಳಿ ಬಣ್ಣದ ಹುಂಡೈ ಐ20 ಕಾರಿನಲ್ಲಿ ಸ್ಫೋಟ ಸಂಭವಿಸಿ 13 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ದೆಹಲಿ ಸ್ಫೋಟದ ಬಳಿಕ ಫರೀದಾಬಾದ್‌ನ ಅಲ್–ಫಲಾಹ್ ವಿಶ್ವವಿದ್ಯಾಲಯದಲ್ಲಿ ಹಲವು ವೈದ್ಯರ ಬಂಧನ ಮತ್ತು 2,900 ಕೆ.ಜಿ. ಸ್ಫೋಟಕಗಳನ್ನು ವಶಕ್ಕೆ ಪಡೆದ ಬಳಿಕ ಜಮ್ಮು ಮತ್ತು ಕಾಶ್ಮೀರದ ಪೊಲೀಸರು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.