ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಶನಿವಾರ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಎರಡು ವರ್ಷದ ಬಾಲಕಿ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಕಟ್ಟಡದ ಮಾಲೀಕ ಮತ್ಲೂಬ್, ಅವರ ಪತ್ನಿ ರಾಬಿಯಾ, ಇಬ್ಬರು ಗಂಡುಮಕ್ಕಳು ಹಾಗೂ ಇತರ ಇಬ್ಬರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಅವರ ಮೃತದೇಹಗಳನ್ನು ಹೊರತೆಗೆದು ಜಿಟಿಬಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಕಟ್ಟಡದಡಿ ಸಿಲುಕಿದ್ದ ಇತರ ಎಂಟು ಜನರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎನ್‌ಡಿಆರ್‌ಎಫ್ ಸೇರಿದಂತೆ ಇತರ ಸಂಸ್ಥೆಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.
‘ಮಾಲೀಕ ಮತ್ತು ಆತನ ಕುಟುಂಬಸ್ಥರು ಕಟ್ಟಡದಲ್ಲಿ ವಾಸವಾಗಿದ್ದರು. ನೆಲಮಹಡಿ ಮತ್ತು ಮೊದಲ ಮಹಡಿಯಲ್ಲಿ ಯಾರೂ ವಾಸವಾಗಿರಲಿಲ್ಲ. ಅವಘಡದಿಂದ ಮುಂಭಾಗದ ಕಟ್ಟಡಕ್ಕೂ ಹಾನಿಯಾಗಿದೆ’ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಈಶಾನ್ಯ) ಸಂದೀಪ್ ಲಂಬಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.