ADVERTISEMENT

ಮಾಜಿ ಸಚಿವ ಸತ್ಯೇಂದ್ರ ಜೈನ್‌ ಆರೋಗ್ಯ ವಿಚಾರಿಸಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಮೇ 2023, 9:12 IST
Last Updated 28 ಮೇ 2023, 9:12 IST
ಅರವಿಂದ ಕೇಜ್ರಿವಾಲ್ ಮತ್ತು ಸತ್ಯೇಂದ್ರ ಜೈನ್‌
ಅರವಿಂದ ಕೇಜ್ರಿವಾಲ್ ಮತ್ತು ಸತ್ಯೇಂದ್ರ ಜೈನ್‌   –ಟ್ವಿಟರ್ ಚಿತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾನುವಾರ ಮಾಜಿ ಸಚಿವ ಸತ್ಯೇಂದ್ರ ಜೈನ್‌ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಜೈನ್‌ ಅವರಿಗೆ ವೈದ್ಯಕೀಯ ಆಧಾರದ ಮೇಲೆ ಸುಪ್ರೀಂಕೋರ್ಟ್‌ ಶುಕ್ರವಾರ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿತ್ತು.

ಸತ್ಯೇಂದ್ರ ಜೈನ್‌ ಅವರು ತಿಹಾರ್‌ ಜೈಲಿನ ಸ್ನಾನಗೃಹದಲ್ಲಿ ಗುರುವಾರ ತಲೆಸುತ್ತಿನಿಂದ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಒದಗಿಸಲಾಗಿದೆ.

ADVERTISEMENT

ಜಾಮೀನು ಅರ್ಜಿ ವಿಚಾರಣೆ ನಡೆಸಿದ, ನ್ಯಾಯಮೂರ್ತಿಗಳಾದ ಜೆ.ಕೆ.ಮಾಹೇಶ್ವರಿ ಮತ್ತು ಪಿ.ಎಸ್‌.ನರಸಿಂಹ ಅವರಿದ್ದ ನ್ಯಾಯಪೀಠ, ‘ಜೈನ್‌ ಅವರು ತಮ್ಮ ಆಯ್ಕೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಜುಲೈ 10ರ ಒಳಗಾಗಿ ಸಂಬಂಧಪಟ್ಟ ವೈದ್ಯಕೀಯ ದಾಖಲೆಗಳನ್ನು ಹಾಜರುಪಡಿಸಬೇಕು’ ಎಂದು ಸೂಚಿಸಿದೆ.

‘ಮಧ್ಯಂತರ ಜಾಮೀನು ಅವಧಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಬಾರದು ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು’ ಎಂದೂ ನ್ಯಾಯಪೀಠ ನಿರ್ದೇಶಿಸಿದೆ.

‘ಎಐಐಎಂಎಸ್‌ ಅಥವಾ ರಾಮಮನೋಹರ ಲೋಹಿಯಾ ಆಸ್ಪತ್ರೆ ವೈದ್ಯರಿಂದ ಜೈನ್‌ ಅವರ ಆರೋಗ್ಯ ತಪಾಸಣೆ ನಡೆಸುವಂತೆ ನಿರ್ದೇಶಿಸಬೇಕು’ ಎಂಬ ಜಾರಿ ನಿರ್ದೇಶನಾಲಯದ ವಾದವನ್ನು ನ್ಯಾಯಪೀಠ ತಳ್ಳಿಹಾಕಿದೆ.

ಸತ್ಯೇಂದ್ರ ಜೈನ್‌ ಪರ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ವಾದ ಮಂಡಿಸಿದರು. ಜಾರಿ ನಿರ್ದೇಶನಾಲಯ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌.ವಿ.ರಾಜು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.