ADVERTISEMENT

ವಿದೇಶಕ್ಕೆ ಪ್ರಯಾಣಿಸಲು ಡಿ.ಕೆ. ಶಿವಕುಮಾರ್‌ಗೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2022, 10:04 IST
Last Updated 30 ಮಾರ್ಚ್ 2022, 10:04 IST
ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್
ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್   

ನವದೆಹಲಿ: ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ತೆರಳಲು ದೆಹಲಿ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ.

ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿಗಳಾದ ಆಶಾ ಮೆನನ್, 'ಅರ್ಜಿದಾರರಿಗೆ ಮಾ. 31 ರಿಂದ ಏ. 6 ರ ನಡುವೆ ದುಬೈ ಮತ್ತು ಅಬುಧಾಬಿಗೆ ಪ್ರಯಾಣಿಸಲು ಅವಕಾಶವಿದೆ. ಅಲ್ಲಿಂದ ಹಿಂದಿರುಗಿದ ವಿಚಾರವನ್ನು ತನಿಖಾಧಿಕಾರಿಗೆ ತಿಳಿಸುತ್ತಾರೆ' ಎಂದು ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್ ಅವರನ್ನು ಪ್ರತಿನಿಧಿಸಿದ್ದ ವಕೀಲ ಮಯಾಂಕ್ ಜೈನ್, ದುಬೈನಲ್ಲಿ ವಿಶೇಷ ಅತಿಥಿಯಾಗಿರುವ ಕಾರ್ಯಕ್ರಮಕ್ಕೆ ಶಿವಕುಮಾರ್ ಅವರ ಉಪಸ್ಥಿತಿಯ ಅಗತ್ಯವಿದೆ ಎಂದು ಹೇಳಿದ್ದರು.

ADVERTISEMENT

2019ರ ಅಕ್ಟೋಬರ್‌ನಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಶಿವಕುಮಾರ್‌ಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್‌, ನ್ಯಾಯಾಲಯದ ಅನುಮತಿಯಿಲ್ಲದೆ ದೇಶ ತೊರೆಯುವಂತಿಲ್ಲ ಎಂಬ ಷರತ್ತು ವಿಧಿಸಿತ್ತು.

ಕರ್ನಾಟಕದಲ್ಲಿ 7 ಬಾರಿ ಶಾಸಕರಾಗಿರುವ ಶಿವಕುಮಾರ್, ದೆಹಲಿಯ ಕರ್ನಾಟಕ ಭವನದಲ್ಲಿ ಉದ್ಯೋಗಿಯಾಗಿರುವ ಹನುಮಂತಯ್ಯ ಮತ್ತು ಇತರರ ಮೇಲೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ತೆರಿಗೆ ವಂಚನೆ ಮತ್ತು ಕೋಟಿ ರೂಪಾಯಿ ಮೌಲ್ಯದ 'ಹವಾಲಾ' ವಹಿವಾಟಿನ ಆರೋಪದ ಮೇಲೆ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಸಲ್ಲಿಸಿದ್ದ ಚಾರ್ಜ್ ಶೀಟ್ ಆಧರಿಸಿ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.