ಎಎಪಿ ಮತ್ತು ಬಿಜೆಪಿ
ನವದೆಹಲಿ: ತನ್ನ ಪಕ್ಷದ ಅಭ್ಯರ್ಥಿಗಳನ್ನು ಖರೀದಿಸಲು ಬಿಜೆಪಿ ಯತ್ನಿಸುತ್ತಿದೆ ಎಂಬ ಆಮ್ ಆದ್ಮಿ ಪಕ್ಷದ (ಎಎಪಿ) ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ತನಿಖೆಗೆ ಆದೇಶಿಸಿದ್ದಾರೆ.
ಬಿಜೆಪಿ ವಿರುದ್ಧ ಎಎಪಿ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಆದೇಶಿಸಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ತನ್ನ ಪಕ್ಷದ 16 ಅಭ್ಯರ್ಥಿಗಳನ್ನು ಖರೀದಿಸಲು ಯತ್ನಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಗುರುವಾರ ಆರೋಪಿಸಿದ್ದರು.
ಪಕ್ಷಾಂತರ ಮಾಡಲು ಎಎಪಿಯ ಶಾಸಕರಿಗೆ ತಲಾ ₹15 ಕೋಟಿ ಮತ್ತು ಸಚಿವ ಸ್ಥಾನದ ಆಮಿಷ ಒಡ್ಡಲಾಗಿದೆ ಎಂದು ಅವರು ಆರೋಪಿಸಿದ್ದರು.
ಬಳಿಕ ಎಎಪಿಯ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಸಹ ಇದೇ ಆರೋಪವನ್ನು ಮಾಡಿದ್ದರು.
ಎಎಪಿ ಆರೋಪಗಳಿಗೆ ಪ್ರತಿಯಾಗಿ ತನಿಖೆಗೆ ಆಗ್ರಹಿಸಿ ಲೆಫ್ಟಿನೆಂಟ್ ಗವರ್ನರ್ ಕಚೇರಿಗೆ ದೆಹಲಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ವಿಷ್ಣು ಮಿತ್ತಲ್ ಪತ್ರ ಬರೆದಿದ್ದರು.
'ಎಎಪಿ ನಾಯಕರು ಯಾವುದೇ ಪುರಾವೆಗಳಿಲ್ಲದೆ ಸುಳ್ಳು ಹಾಗೂ ದಾರಿ ತಪ್ಪಿಸುವ ಆರೋಪಗಳನ್ನು ಮಾಡಿ ದೆಹಲಿಯಲ್ಲಿ ಭೀತಿಯ ಹಾಗೂ ಅಶಾಂತಿಯ ವಾತಾವರಣ ಸೃಷ್ಟಿಸಲು ಯತ್ನಿಸುತ್ತಿದೆ' ಎಂದು ಅವರು ಆರೋಪಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.