ದೆಹಲಿಯ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಸ್ವೀಕರಿಸಿದ ಸ್ಥಳಕ್ಕೆ ಧಾವಿಸಿದ ಪೊಲೀಸರು, ಬಾಂಬ್ ನಿಗ್ರಹ ಪಡೆಯ ಸಿಬ್ಬಂದಿ ಶೋಧ ಕಾರ್ಯ ನಡೆಸಿದರು
–ಪಿಟಿಐ ಚಿತ್ರ
ನವದೆಹಲಿ: ದೆಹಲಿಯ ಶಾಲೆಯೊಂದಕ್ಕೆ ಇಂದು (ಶುಕ್ರವಾರ) ಬೆಳಿಗ್ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ವಾರದಲ್ಲಿ ರಾಷ್ಟ್ರ ರಾಜಧಾನಿಯ ವಿವಿಧ ಶಾಲೆಗಳಿಗೆ ಬೆದರಿಕೆ ಸಂದೇಶ ಕಳುಹಿಸಿದ ಆರನೇ ಪ್ರಕರಣ ಇದಾಗಿದೆ.
ಬಾಂಬ್ ಬೆದರಿಕೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
‘ದ್ವಾರಕಾದ ಸೆಕ್ಟರ್ 23ರ ಡಿಪಿಎಸ್ ಶಾಲೆಗೆ ಬೆಳಿಗ್ಗೆ 5:02ಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದ ಕುರಿತು ಮಾಹಿತಿ ನೀಡಿದರು. ತಕ್ಷಣವೇ ಆಗ್ನಿಶಾಮಕ ಇಲಾಖೆ, ಸ್ಥಳೀಯ ಪೊಲೀಸರು, ಶ್ವಾನಪಡೆ, ಬಾಂಬ್ ನಿಗ್ರಹ ತಂಡಗಳು ಸ್ಥಳಕ್ಕೆ ಧಾವಿಸಿ ಶೋಧ ನಡೆಸಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯ ಆರು ಶಾಲೆಗಳಿಗೆ ಡಿ.14ರಂದು ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಆದೇ ರೀತಿ ಡಿ.13ರಂದು ದೆಹಲಿಯ ಸುಮಾರು 30 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದವು.
ಡಿಸೆಂಬರ್ 9ರಂದು ದೆಹಲಿಯ 44 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಮೇ ತಿಂಗಳಲ್ಲಿ 250ಕ್ಕೂ ಅಧಿಕ ಶಾಲೆಗಳು, ಆಸ್ಪತ್ರೆ ಮತ್ತು ಇತರೆ ಸಂಸ್ಥೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.