
ನವದೆಹಲಿ: ಸೈಯದ್ ಫೈಜ್ ಇಲಾಹಿ ಮಸೀದಿ ಬಳಿ ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಐವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನ್ಯಾಯಾಲಯದ ಆದೇಶದ ಮೇರೆಗೆ ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ), ಮಸೀದಿ ಮತ್ತು ಹತ್ತಿರದ ಸ್ಮಶಾನಕ್ಕೆ ಹೊಂದಿಕೊಂಡಿರುವ ಭೂಮಿಯಲ್ಲಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾಗ ಪೊಲೀಸರು ಮತ್ತು ಎಂಸಿಡಿ ಸಿಬ್ಬಂದಿ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ಮತ್ತು ಗಾಜಿನ ಬಾಟಲಿಗಳನ್ನು ತೂರಿದ್ದಾರೆ. ಘಟನೆಯಲ್ಲಿ ಐವರು ಪೊಲೀಸರು ಗಾಯಗೊಂಡಿದ್ದಾರೆ.
ಘಟನೆಯ ಬೆನ್ನಲ್ಲೇ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
‘ಕಲ್ಲು ತೂರಾಟ ಮಾಡಿದರವನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ. ಹಿಂಸಾಚಾರವು ಸ್ವಯಂಪ್ರೇರಿತವಾಗಿದೆಯೇ? ಅಥವಾ ಎಂಸಿಡಿ ಕಾರ್ಯಾಚರಣೆಯನ್ನು ಅಡ್ಡಿಪಡಿಸಲು ಪೂರ್ವ ಯೋಜಿತ ಪ್ರಯತ್ನವಾಗಿದೆಯೇ? ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.
ದುಷ್ಕರ್ಮಿಗಳನ್ನು ಪತ್ತೆ ಹಚ್ಚುವ ಸಲುವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸಿಸಿಟಿವಿ ದೃಶ್ಯಾವಳಿಗಳು ಮತ್ತು ವಿಡಿಯೊ ತುಣುಕುಗಳನ್ನು ವಿಶ್ಲೇಷಿಸಲಾಗುತ್ತಿದೆ. ತನಿಖೆಯ ಭಾಗವಾಗಿ ಸಾಕ್ಷಿಗಳು ಮತ್ತು ಬಂಧಿತ ವ್ಯಕ್ತಿಗಳ ಹೇಳಿಕೆಗಳನ್ನು ಸಹ ದಾಖಲಿಸಲಾಗುತ್ತಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ಕಾರ್ಯಾಚರಣೆಯ ವೇಳೆ ಸೈಯದ್ ಫೈಜ್ ಇಲಾಹಿ ಮಸೀದಿಗೆ ಯಾವುದೇ ಹಾನಿಯಾಗಿಲ್ಲ ಎಂದು ಎಂಸಿಡಿ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.