ADVERTISEMENT

ಹುಬ್ಬಳ್ಳಿ – ದೆಹಲಿ ವಿಮಾನ ಸೇವೆ ಆರಂಭ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2022, 20:46 IST
Last Updated 14 ನವೆಂಬರ್ 2022, 20:46 IST

ನವದೆಹಲಿ:ಇಂಡಿಗೊ ವಿಮಾನಯಾನ ಕಂಪನಿಯುವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ದೆಹಲಿ ನಡುವೆ ಸೋಮವಾರದಿಂದ ನಿತ್ಯ ವಿಮಾನ ಸೇವೆ ಆರಂಭಿಸಿದೆ.

ವಿಮಾನವು ಪ್ರತಿದಿನ ಬೆಳಿಗ್ಗೆ 10ಕ್ಕೆ ದೆಹಲಿಯಿಂದ ಹೊರಟು ಹುಬ್ಬಳ್ಳಿಯನ್ನು ಮಧ್ಯಾಹ್ನ 12.45ಕ್ಕೆ ತಲುಪಲಿದೆ. ಮರಳಿ ಮಧ್ಯಾಹ್ನ 1.15ಕ್ಕೆ ಹುಬ್ಬಳ್ಳಿಯಿಂದ ಹೊರಟು 3.45ಕ್ಕೆ ದೆಹಲಿ ತಲುಪಲಿದೆ.

ಈ ಸೇವೆಯನ್ನು ಉದ್ಘಾಟಿಸಿದ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ‘ಹುಬ್ಬಳ್ಳಿ ವಿಮಾನ ನಿಲ್ದಾಣವು ಉತ್ತರ ಕರ್ನಾಟಕ ಹಾಗೂ ದಕ್ಷಿಣ ಮಹಾರಾಷ್ಟ್ರದ ನಿವಾಸಿಗಳಿಗೆ ಸಂಪರ್ಕ ಸೇತುವಾಗಿ ಕಾರ್ಯನಿರ್ವಹಿಸಲಿದೆ’ ಎಂದರು.

ADVERTISEMENT

‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡುತ್ತಿದೆ. ಹುಬ್ಬಳ್ಳಿ ನಿಲ್ದಾಣದಲ್ಲಿ ಹೊಸ ಟರ್ಮಿನಲ್‌ ಕಟ್ಟಡ ನಿರ್ಮಿಸಲಾಗಿದೆ. ಐಎಲ್‌ಎಸ್‌ ವ್ಯವಸ್ಥೆ ಅಳವಡಿಸಲಾಗಿದೆ. ರನ್‌ವೇಯನ್ನು ಮತ್ತಷ್ಟು ವಿಸ್ತರಿಸಲಾಗುತ್ತಿದೆ’ ಎಂದರು.

ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಉದ್ಘಾಟನಾ ಸಮಾರಂಭದಲ್ಲಿಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಶಾಸಕರಾದ ಜಗದೀಶ ಶೆಟ್ಟರ್‌, ಅರವಿಂದ ಬೆಲ್ಲದ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಂಡರು. ಸಚಿವ ಜೋಶಿ ಅವರು ಹುಬ್ಬಳ್ಳಿಯಿಂದ ನವದೆಹಲಿಗೆ ಹೊರಟ ಮೊದಲ ವಿಮಾನದಲ್ಲಿ ಪ್ರಯಾಣ ಬೆಳೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.