ADVERTISEMENT

ಮೇಕೆದಾಟು ಯೋಜನೆಗೆ ಅನುಮೋದನೆ ನೀಡಬೇಡಿ: ಮೋದಿಗೆ ಸ್ಟಾಲಿನ್‌ ಒತ್ತಾಯ

ಈ ಯೋಜನೆಗೆ ಅನುಮೋದನೆ ನೀಡದಂತೆ ಕೇಂದ್ರಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2022, 16:31 IST
Last Updated 31 ಮಾರ್ಚ್ 2022, 16:31 IST
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್   

ಚೆನ್ನೈ: ಬೆಂಗಳೂರು ಸೇರಿದಂತೆ ಇನ್ನಿತರ ರಾಜ್ಯಗಳಿಗೆ ಕುಡಿಯುವ ನೀರು ಒದಗಿಸುವ ಕರ್ನಾಟಕ ಸರ್ಕಾರದ 'ಮೇಕೆದಾಟು' ಯೋಜನೆಗೆ ಅನುಮೋದನೆ ನೀಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ತಮಿಳುನಾಡು ಸರ್ಕಾರ ಒತ್ತಾಯಿಸಿದೆ.

ದೆಹಲಿ ಪ್ರವಾಸದಲ್ಲಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಕುಡಿಯುವ ನೀರಿನ ಹೆಸರಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಮುಂದಾಗಿರುವ ಕರ್ನಾಟಕ ಸರ್ಕಾರದ ಮೇಕೆದಾಟು ಯೋಜನೆಯು 2018ರ ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆಯಾಗಿದೆ.ಹೀಗಾಗಿ ಮೇಕೆದಾಟು ಯೋಜನೆ ಜಾರಿಯು ತಮಿಳುನಾಡು ರೈತ ಸಮುದಾಯದ ಹಿತಾಸಕ್ತಿ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದರು.

ಅಲ್ಲದೆ ವರ್ಷದಲ್ಲಿ ಉತ್ತಮ ಮಳೆಯಾಗಲಿ ಅಥವಾ ಸಾಮಾನ್ಯ ಮಳೆಯೇ ಆಗಲಿ, ತನ್ನ ಪಾಲಿನ ನೀರನ್ನು ಕರ್ನಾಟಕ ಸರ್ಕಾರ ಬಿಡುಗಡೆ ಮಾಡುವುದಿಲ್ಲ ಎಂದು ದೂರಿದ ಅವರು, ಮೇಕೆದಾಟು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕರ್ನಾಟಕದ ಯಾವುದೇ ಯೋಜನೆಗಳಿಗೆ ಅನುಮೋದನೆ ನೀಡದಂತೆ ಕೇಂದ್ರ ಜಲಶಕ್ತಿ ಇಲಾಖೆಗೆ ನಿರ್ದೇಶನ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ADVERTISEMENT

ಜೊತೆಗೆ ಮೇಕೆದಾಟು ಯೋಜನೆಗೆ ಅನುಮೋದನೆ ನೀಡಬಾರದು ಎಂದು ಕಾವೇರಿ ನಿರ್ವಹಣೆ ಪ್ರಾಧಿಕಾರಕ್ಕೂ ಸೂಚನೆ ನೀಡಬೇಕು. ತಮಿಳುನಾಡು ಸರ್ಕಾರದ ಅನುಮತಿಯಿಲ್ಲದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕರ್ನಾಟಕ ಸರ್ಕಾರ ಯಾವುದೇ ಯೋಜನೆ ಕೈಗೊಳ್ಳಬಾರದು ಎಂದು ಅವರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.